ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ₹1489 ಕೋಟಿ ಸಾಲ ಮನ್ನಾ: ಣರಾಜ್ಯೋತ್ಸವದಲ್ಲಿ ಸಚಿವ ಎಚ್‌.ಡಿ.ರೇವಣ್ಣ

ಶೀಘ್ರ ಋಣಮುಕ್ತ ಪತ್ರ
Last Updated 26 ಜನವರಿ 2019, 13:14 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿದ್ದ ₹1489 ಕೋಟಿ ಸಾಲ ಮನ್ನಾಕ್ಕೆ ಕ್ರಮವಹಿಸಲಾಗಿದೆ ಎಂದು ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದ ಅವರು, ಜಿಲ್ಲೆ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ರೈತರ ಸಾಲಮನ್ನಾ ಸೇರಿದಂತೆ ಹಲವು ಜನಪರ ಕಾರ್ಯಕ್ರಮ ಘೋಷಣೆ ಮಾಡಿದೆ ಎಂದು ನುಡಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 93,982 ರೈತರ ₹985 ಕೋಟಿ, ಸಹಕಾರ ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ 1,19,977 ರೈತರು ಮಾಡಿರುವ ₹504.65 ಕೋಟಿ ಸಾಲಮನ್ನಾಕ್ಕೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದಲ್ಲಿಯೇ ಸಾಲಮನ್ನಾ ಪ್ರಕ್ರಿಯೆಯ ಪೂರ್ಣಗೊಳಿಸಿದ ಮಾದರಿ ಜಿಲ್ಲೆ ಹಾಸನ. ಶೀಘ್ರದಲ್ಲಿಯೇ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ಋಣಮುಕ್ತ ಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿದರು.

ದಶಕದಿಂದ ನನೆಗುದಿಗೆ ಬಿದ್ದಿದ್ದ ಹಲವು ಯೋಜನೆಗಳು ಮರುಜೀವ ಪಡೆದಿವೆ, ಹಲವಾರು ಹೊಸ ಕಾಮಗಾರಿಗಳು ಚಾಲನೆಗೊಳ್ಳುತ್ತಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ದುರಸ್ತಿ, ನವೀಕರಣ ಮತ್ತು ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ₹ 27.41 ಕೋಟಿ ಅನುದಾನ ಒದಗಿಸಲಾಗಿದೆ. 370 ಶಾಲಾ ಕೊಠಡಿಗಳ ದುರಸ್ತಿ ಹಾಗೂ ಮರುನಿರ್ಮಾಣ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪ್ರಯೋಗಾಲಯ ಮತ್ತು ವಸತಿ ನಿಲಯ, ವಿವಿಧ ಅಭಿವೃದ್ಧಿ ಕಾಮಗಾರಿಗೆ ₹ 50 ಕೋಟಿ ಮಂಜೂರು ಮಾಡಲಾಗಿದೆ. ಗಂಧದ ಕೋಠಿಯಲ್ಲಿ ತಲಾ ₹4.95 ಕೋಟಿ ವೆಚ್ಚದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಧಾನ ಹಾಗೂ ವಿಭಜಿತ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಗಂಧದ ಕೋಠಿ ಆವರಣದಲ್ಲಿ ನೂತನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಕಾಮಗಾರಿಗೆ ₹ 4.98 ಕೋಟಿ ಅನುಮೋದನೆ ನೀಡಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ಬೇಲೂರು-ಹಾಸನ ಬಿಳಿಕೆರೆ ರಸ್ತೆ ಸೇರಿದಂತೆ ₹ 843.75 ಕೋಟಿ ವೆಚ್ಚದಲ್ಲಿ 7 ಮಾರ್ಗಗಳಲ್ಲಿ 237 ಕಿ.ಮೀ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ₹ 72 ಕೋಟಿ ವೆಚ್ಚದಲ್ಲಿ 2ನೇ ಹಂತದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಾಮಗಾರಿಗೆ ಅನುಮೋದನೆ ದೊರೆತಿದೆ. ವಸತಿರಹಿತ ಫಲಾನುಭವಿಗಳಿಗೆ ಬಸವ ವಸತಿ ಯೋಜನೆ, ಬಿ.ಆರ್ ಅಂಬೇಡ್ಕರ್ ನಿವಾಸ್ ಯೋಜನೆ, ಪ್ರಧಾನ ಮಂತ್ರಿ ಅವಾಸ್ ಯೋಜನೆಗಳಡಿ 23,508 ಮನೆಗಳು ಮಂಜೂರಾಗಿರುತ್ತದೆ ಎಂದು ವಿವರಿಸಿದರು.

ಶಾಸಕ ಪ್ರೀತಂ ಜೆ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಟಿ. ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ವರಿಷ್ಠಾಧಿಕಾರಿ ಎ.ಎನ್. ಪ್ರಕಾಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪುಟ್ಟಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT