ಸಾಲ ಮನ್ನಾ: ಮಾತು ತಪ್ಪಿದ ಸಿ.ಎಂ; ಈಶ್ವರಪ್ಪ ವಾಗ್ದಾಳಿ

7
ಬಿಜೆಪಿ ನಾಯಕ ಕೆ.ಎಸ್.

ಸಾಲ ಮನ್ನಾ: ಮಾತು ತಪ್ಪಿದ ಸಿ.ಎಂ; ಈಶ್ವರಪ್ಪ ವಾಗ್ದಾಳಿ

Published:
Updated:
Deccan Herald

ಹಾಸನ : ‘ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಚಿವರು ವರ್ಗಾವಣೆ ದಂದೆಗೆ ಪೈಪೋಟಿ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

‘ಸಚಿವರು ಅಧಿಕಾರಿಗಳ ವರ್ಗಾವಣೆ ಮಾಡುವ ಮೂಲಕ ರಾಜ್ಯವನ್ನು ಲೂಟಿ ಮಾಡಲು ಹೊರಟಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ 20 ಕ್ಕೂ ಹೆಚ್ಚು ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಆರೋಪಿಸಿದರು.

‘ಚುನಾವಣೆಗೂ ಮುನ್ನಾ ರೈತರ ಎಲ್ಲಾ ರೀತಿಯ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿ ಮಾತಿಗೆ ತಪ್ಪಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ವಿಶ್ವಾಸ ಪಡೆಯುವ ಸಲುವಾಗಿ ಎಚ್.ಡಿ. ದೇವೇಗೌಡರು ತಮ್ಮ ಪುತ್ರನಿಂದ ನಾಟಿ ಮಾಡಿಸಿದ್ದಾರೆ. ಇದು ಒಂದು ರೀತಿ ಕೋಳಿ ತನ್ನ ಮೊಟ್ಟೆಗೆ ಕಾವು ಕೊಡುವುದನ್ನು ಹೇಳಿಕೊಟ್ಟಂತಾಗಿದೆ’ ಎಂದು ವ್ಯಂಗ್ಯವಾಡಿದರು.

‘ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಇದುವರೆಗೂ ಶಾಸಕರ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಕಚ್ಚಾಡಿಕೊಂಡು ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲು ಅವಕಾಶ ಮಾಡಿಕೊಡುತ್ತಾರೆ. ಸಮ್ಮಿಶ್ರ ಸರ್ಕಾರದಿಂದ ಅಸಮಾಧಾನಗೊಂಡಿರುವ ಹಲವು ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿಯನ್ನು ಪ್ರಧಾನಿ ಮಾಡಲು ಉತ್ಸುಕರಾಗಿದ್ದಾರೆ’ ಎಂದು ತಿಳಿಸಿದರು.

‘ವಿಧಾನಸಭೆ ಚುನಾವಣೆಯಲ್ಲಿ ಎಲ್ಲಿ ಎಡವಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗಾರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಪ್ರಾರಂಭವಾಗಿದೆ. ಸಚಿವ ರೇವಣ್ಣ ಅವರ ದಬ್ಬಾಳಿಕೆ ಹಾಗೂ ಏಕಪಕ್ಷೀಯ ಆಡಳಿತದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಅಸಮಾಧಾನಗೊಂಡಿದ್ದಾರೆ. ಇದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಅಭಿಪ್ರಾಯಪಟ್ಟರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಪ್ರೀತಂ ಜೆ.ಗೌಡ, ಮುಖಂಡರಾದ ನಾರಾಯಣ, ಬಿ.ವಿ. ಕರೀಗೌಡ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ರೇಣುಕುಮಾರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !