ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಕೃಷಿ ಅಭಿವೃದ್ಧಿಗೆ ಯೋಜನೆ ರೂಪಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್‌
Last Updated 4 ಜೂನ್ 2019, 15:29 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಸಂಯೋಜಿತ ಬೇಸಾಯದ ಮೂಲಕ ಸಮಗ್ರ ಕೃಷಿ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿಗೊಳಿಸುವುದು ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಹೇಳಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಮತ್ತು ತೋಟಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ರೈತರಿಗೆ ಪೂರಕ ಕಾರ್ಯಕ್ರಮ ಜಾರಿಗೆ ತಂದು ಅಗತ್ಯ ಮಾರ್ಗದರ್ಶನ ಹಾಗೂ ಸೌಲಭ್ಯ ವಿತರಿಸುವಂತೆ ನಿರ್ದೇಶನ ನೀಡಿದರು.

ಬೆಳೆ ವಿಮೆ ಯೋಜನೆ ಕೇವಲ ಹೆಸರಿಗಷ್ಟೇ ಸೀಮಿತವಾಗದೆ ರೈತರ ಸಂಕಷ್ಟ ಪರಿಹಾರ ಮಾಡುವಂತಿರಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾಳಜಿವಹಿಸಿ ರೈತರ ಪರವಾಗಿ ಕಾರ್ಯ ನಿರ್ವಹಿಸಬೇಕು ಮತ್ತು ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿಗೆ ಅನುದಾನದ ಕೊರತೆ ಇರದಿದ್ದರೂ ನೀರಿನ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ. ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗ ಇನ್ನಷ್ಟು ಶ್ರಮವಹಿಸಿ ಎಲ್ಲಾ ಸಮಸ್ಯಾತ್ಮಕ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರು.

ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್ ಸ್ಥಾಪಿಸಿ, ಹೆಚ್ಚಿನ ಸಂಖ್ಯೆಯ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ವಿತರಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ವೈದ್ಯಕೀಯ ಸೇವಾ ಸೌಲಭ್ಯಗಳು ಇನ್ನಷ್ಟು ಸುಧಾರಣೆಯಾಗಬೇಕು. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‍ಗಳ ನೇಮಕವಾಗಬೇಕು ಹಾಗೂ ಔಷಧಿಗಳ ಪೂರೈಕೆಯಾಗಬೇಕು. ರೋಗಿಗಳನ್ನು ಅಲೆದಾಡಿಸದೆ, ಸಕಾಲದಲ್ಲೇ ಚಿಕಿತ್ಸೆ ಒದಗಿಸುವಂತಾಗಬೇಕು ಎಂದು ತಾಕೀತು ಮಾಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಅಪರಿಚಿತರಿಗೆ ಹಗಲು ಅಥವಾ ರಾತ್ರಿ ಪ್ರವೇಶ ನೀಡಬಾರದು. ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ನಿಷೇಧವಾಗಬೇಕು. ತುರ್ತು ಸಂದರ್ಭದಲ್ಲಿ ಕರೆ ಮಾಡಲು, ಸ್ವೀಕರಿಸಲು, ಸ್ಥಿರ ದೂರವಾಣಿ ವ್ಯವಸ್ಥೆ ಸೌಲಭ್ಯ ಕಲ್ಪಿಸಿ ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಲಹೆ ನೀಡಿದರು.

ಶಾಲೆಗಳಲ್ಲಿ ಶೀಘ್ರ ಪಠ್ಯ ಪುಸ್ತಕಗಳ ವಿತರಣೆಯಾಗಬೇಕು ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ ಬೇಗ ಒದಗಿಸಿ ವಿದ್ಯುತ್ ಸಂಪರ್ಕಕ್ಕೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ 1,26,000 ರೈತರಿಗೆ ₹ 504 ಕೋಟಿ ಸಾಲಮನ್ನಾವಾಗಿದ್ದು, ಈವರೆಗೆ ₹ 348 ಕೋಟಿ ಬಿಡುಗಡೆಯಾಗಿದೆ. ಉಳಿದ ರೈತರಿಗೆ ಸಾಲದ ಅವಧಿಗೆ ಅನುಗುಣವಾಗಿ ಶೀಘ್ರವೇ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಸಹಕಾರ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳ ಯೋಜನೆಗಳು, ಮುಂಗಾರು ಸಿದ್ಧತೆ, ಬಿತ್ತನೆ ರಸಗೊಬ್ಬರಗಳ ಲಭ್ಯತೆ, ಆಲೂಗಡ್ಡೆ ವಿತರಣೆ, ಸಬ್ಸಿಡಿ, ಬೆಳೆ ವಿಮೆ, ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಕೆಡಿಪಿ ಸಭೆಗಳಿಗೆ ಗೈರು ಹಾಜರಾಗುವ ಹಾಗೂ ಸಮಯಕ್ಕೆ ಸರಿಯಾಗಿ ಹಾಜರಾಗದ ಅಧಿಕಾರಿಗಳ ವಿರುದ್ಧ ನೋಟಿಸ್‌ ಜಾರಿ ಮಾಡುವಂತೆ ಶ್ವೇತಾ ದೇವರಾಜ್ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT