ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗುವಳಿದಾರರ ತೆರವು ಮಾಡಬೇಡಿ: ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಸಾವಂತನಹಳ್ಳಿ ಗ್ರಾಮಸ್ಥರ ಆಗ್ರಹ
Published 5 ಡಿಸೆಂಬರ್ 2023, 14:25 IST
Last Updated 5 ಡಿಸೆಂಬರ್ 2023, 14:25 IST
ಅಕ್ಷರ ಗಾತ್ರ

ಹಾಸನ: ತಾಲ್ಲೂಕಿನ ಸಾವಂತನಹಳ್ಳಿಯ ಸರ್ವೆ ನಂಬರ್ 99ರಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವವರನ್ನು ತೆರವುಗೊಳಿಸಬಾರದು ಎಂದು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, ‘ಸರ್ವೆ ನಂಬರ್ 99ರ ಗೋಮಾಳದ ಜಮೀನಿನಲ್ಲಿ ಸುಮಾರು 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈವರೆಗೂ ಕಾನೂನು ಬದ್ಧವಾದ ದಾಖಲಾತಿ ನೀಡುವಲ್ಲಿ ಅಧಿಕಾರಿಗಳು ಉದಾಸೀನ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಈ ಸಂಬಂಧ ಹೈಕೋರ್ಟ್‌ನಲ್ಲಿ ದಾವೆ ಹಾಕಿದ್ದು, ವಿಚಾರಣೆ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಆದೇಶ ಆಗಿದೆ ಎಂದು ಹೇಳಿಕೊಂಡು, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರನ್ನು ತೆರವುಗೊಳಿಸಲು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ನ.29ರಂದು ಇಲ್ಲಿನ ತಹಶೀಲ್ದಾರರು, ಲೋಕಾಯುಕ್ತರ ಸೂಚನೆ ಮೇರೆಗೆ ಸ್ಥಳ ಪರಿಶೀಲನೆ ನಡೆಸಿ, ಅನುಭವದಲ್ಲಿರುವ ಗ್ರಾಮಸ್ಥರನ್ನು ವಿಚಾರಣೆ ನಡೆಸಿದ್ದು, ಮಂಜೂರಾತಿ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

‘ಇದೀಗ ಇದಕ್ಕೆ ವ್ಯತಿರಿಕ್ತವಾಗಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದು, ಗ್ರಾಮಸ್ಥರನ್ನು ತೆರವುಗೊಳಿಸಿ ಮಂಜೂರಾತಿದಾರರಿಗೆ ಸ್ವಾಧೀನ ಮಾಡಿಸಿ ಕೊಡುವುದಾಗಿ ಸುಳ್ಳು ವರದಿ ಸಲ್ಲಿಸಿದ್ದಾರೆ. ಇದು ಕಾನೂನುಬಾಹಿರ’ ಎಂದು ಆರೋಪಿಸಿದರು.

‘ವಾಸ್ತವಾಂಶದ ವಿರುದ್ಧವಾಗಿ ವರದಿ ನೀಡಿರುವ ತಹಶೀಲ್ದಾರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಗ್ರಾಮಸ್ಥರಾದ ಕರೀಗೌಡ, ವೀರಭದ್ರಗೌಡ, ವೇಣುಗೋಪಾಲ್, ಶ್ರೀನಿವಾಸ್, ದೀಪಾ, ಹನುಮಂತಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT