ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಚರ್ಚೆಗೆ ಅಪಾರ್ಥ ಬೇಡ

ಎಲ್ಲರಿಗೂ ತೃಪ್ತಿಯಾಗುವಂತೆ ಸಂಪುಟ ವಿಸ್ತರಣೆ: ವಿಜಯೇಂದ್ರ
Last Updated 4 ಫೆಬ್ರುವರಿ 2020, 14:15 IST
ಅಕ್ಷರ ಗಾತ್ರ

ಹಾಸನ: ‘ಸಂಪುಟ ವಿಸ್ತರಣೆಯಾದ ಬಳಿಕ ಅಸಮಾಧಾನ ಸ್ಫೋಟವಾಗಲಿದೆಯೋ ಅಥವಾ ಕೆಪಿಸಿಸಿ ಅಧ್ಯಕ್ಷರ ನೇಮಕ ಬಳಿಕ ಆಗಲಿದೆಯೋ ಎಂಬುದನ್ನು ಕಾದು ನೋಡೋಣ’ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿದೆ. ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿದ ಬಳಿಕ ಇದೇ 6 ರಂದು ಸಿ.ಎಂ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಕರ್ನಾಟಕಕ್ಕೂ ಆದ್ಯತೆ ನೀಡಲಾಗುವುದು. ಎಲ್ಲರೂ ತೃಪ್ತಿಯಾಗುವಂತೆ ಸಂಪುಟ ವಿಸ್ತರಣೆ ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಲ ಶಾಸಕರು ಪ್ರತ್ಯೇಕ ಸಭೆ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದಲ್ಲಿ ಅನೇಕ ಹಿರಿಯ ಶಾಸಕರಿದ್ದು, ಎಲ್ಲರಿಗೂ ಮಂತ್ರಿಯಾಗಬೇಕೆಂಬ ಅಪೇಕ್ಷೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ನಡೆಯುವ ಚರ್ಚೆಗಳಿಗೆ ಅಪಾರ್ಥ ಕಲ್ಪಿಸುವುದು ಬೇಡ. ಮಂತ್ರಿಮಂಡಲ ರಚನೆ ವೇಳೆ ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿ ಮುಂದಿಟ್ಟಿದ್ದಾರೆ’ ಎಂದು ಸ್ಪಷ್ಟ ಪಡಿಸಿದರು.

ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್ ಸಿಂಹ ನೇತೃತ್ವದಲ್ಲಿ ಹಲವು ಹೋರಾಟ ಮಾಡಲಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಕುರಿತು ಅರಿವು ಮೂಡಿಸುವ ಕೆಲಸ ನಡೆದಿದೆ. ಸಿಎಎ ಬಗ್ಗೆ ವಿರೋಧಿಗಳು ಅಪಪ್ರಚಾರ ಮಾಡಿ, ಅಸಂತೋಷ ಉಂಟು ಮಾಡುತ್ತಿದ್ದಾರೆ. ಹಾಗಾಗಿ ಜನರ ಬಳಿಗೆ ಹೋಗಿ ಜಾಗೃತಿ ಮೂಡಿಸಲಾಗುತ್ತಿದೆ. ಯುವ ಮೋರ್ಚಾವನ್ನು ಮತ್ತಷ್ಟು ಪಡಿಸಲಾಗುವುದು ಎಂದರು.

ಬಿಎಸ್‌ವೈ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಜೆಡಿಎಸ್‌ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಸಿ.ಎಂ ಆದ ನಂತರ ಜಿಲ್ಲೆಯಲ್ಲಿ ಯಾವುದೇ ಯೋಜನೆಗಳಿಗೆ ತಡೆ ನೀಡಿಲ್ಲ. ಆದರೆ, ಹಿಂದಿನ ಸರ್ಕಾರದಲ್ಲಿ ಕೆಲವು ಕ್ಷೇತ್ರಗಳಿಗೆ ಮಾತ್ರ ಅನುದಾನ ಸೀಮಿತ ಆಗಿತ್ತು. ಎಲ್ಲರಿಗೂ ನ್ಯಾಯ ಒದಗಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ನುಡಿದರು.

‘ಮೂರುವರೆ ವರ್ಷ ಯಡಿಯೂರಪ್ಪ ಅಧಿಕಾರ ನಡೆಸುವರು. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬೇರೆ ಕಾರಣಕ್ಕೆ ನನಗೆ ವರುಣ ಕ್ಷೇತ್ರದ ಟಿಕೆಟ್ ಸಿಗಲಿಲ್ಲ. ರಾಷ್ಟ್ರೀಯ ಪಕ್ಷವಾಗಿರುವ ಕಾರಣ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಶಾಸಕ ಪ್ರೀತಂ ಗೌಡರಿಗೆ ಸೂಕ್ತ ಸ್ಥಾನಮಾನ ಸಿಗಲಿದಯೇ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT