ಹಾಸನ: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹಲವು ಜನರು ಗಾಯಗೊಂಡಿದ್ದಾರೆ.
ಡಿಕ್ಕಿ: ಯುವಕ ಸಾವು
ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಇನ್ನೋವಾ ಕಾರು ಹಾಗೂ ಗೂಡ್ಸ್ ವಾಹನ ಡಿಕ್ಕಿ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 6 ಜನರಿಗೆ ಗಾಯಗಳಾಗಿವೆ.
ಬೆಂಗಳೂರಿನ ಕೆ.ಆರ್.ಪುರಂನ ಎನ್‌ಆರ್‌ಐ ಲೇಔಟ್ ನಿವಾಸಿ ಹರಿಕೃಷ್ಣ ಅವರು ಕಾರಿನಲ್ಲಿ ಕುಟುಂಬದ ಸದಸ್ಯರೊಂದಿಗೆ ಶೃಂಗೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎದುರಿನಿಂದ ಬಂದ ಗೂಡ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲರೂ ಕಾರಿನಿಂದ ರಸ್ತೆಯ ಮೇಲೆ ಬಿದ್ದಿದ್ದು, ನಂದನ್‍ಕುಮಾರ್ ಎಂಬುವವರ ತಲೆಗೆ ತೀವ್ರ ಪೆಟ್ಟಾಗಿತ್ತು, ಕೂಡಲೇ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂದಕುಮಾರ್ (37) ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ಚನ್ನರಾಯಪಟ್ಟಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್‍ಗಳ ಡಿಕ್ಕಿ: ಸಾವು
ಜಾವಗಲ್ ಗ್ರಾಮದ ಬಳಿ ಬೈಕ್‌ಗೆ ಇನ್ನೊಂದು ಬೈಕ್ ಡಿಕ್ಕಿ ಹೊಡೆದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೇಲಿನಹೊಸಹಳ್ಳಿ ಗ್ರಾಮದ ಮಲ್ಲಾನಾಯ್ಕ (39) ಮೃತಪಟ್ಟ ವ್ಯಕ್ತಿ. ಮಲ್ಲಾನಾಯ್ಕ ತಮ್ಮ ಪತ್ನಿಯೊಂದಿಗೆ ಜಾವಗಲ್‌ಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.
ರಸ್ತೆಗೆ ಬಿದ್ದ ಮಲ್ಲಾನಾಯ್ಕ ತಲೆಗೆ ಪೆಟ್ಟಾಗಿದ್ದು, ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾದಚಾರಿ ಸಾವು
ಹಾಸನದ ರೈಲ್ವೆ ನಿಲ್ದಾಣದ ಬಳಿ ಊಟ ಮಾಡಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಅಸ್ಸಾಂ ರಾಜ್ಯದ ನಾಂಗೂಮ್ ರಾಗರಂಗನ್ (32) ಮೃತಪಟ್ಟ ವ್ಯಕ್ತಿ. ನಡೆದುಕೊಂಡು ಹೋಗುತ್ತಿದ್ದ ವೇಳೆ, ಡೇರಿ ವೃತ್ತದ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಲೆ ರಸ್ತೆಯ ಮೇಲೆ ಬಿದ್ದ ನಾಂಗೂಮ್ ರಾಗರಂಗನ್ ತಲೆ ಹಾಗೂ ದೇಹದ ಭಾಗಗಳಿಗೆ ಗಾಯಗಳಾಗಿತ್ತು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಹಾಸನ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃದ್ಧೆ ಮರಣ
ಸಂಬಂಧಿಯೊಬ್ಬರ ಬೈಕ್‌ನಲ್ಲಿ ತೆರಳುತ್ತಿದ್ದ ಲಕ್ಷ್ಮಮ್ಮ (75) ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.
ಚಿಕಿತ್ಸೆಗಾಗಿ ಲಕ್ಷ್ಮಮ್ಮ ಅವರನ್ನು ಅವರ ಸಂಬಂಧಿ ಕೃಷ್ಣ ಎಂ.ಪಿ. ಎನ್ನುವವರು ಬೈಕ್‌ನಲ್ಲಿ ಕೊಣನೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಕೊಣನೂರು ಠಾಣೆ ವ್ಯಾಪ್ತಿಯ ಸಿರಧನಹಳ್ಳಿ ಗ್ರಾಮದ ಬಸ್‍ನಿಲ್ದಾಣದ ಮುಂಭಾಗದ ಬಸವರಾಪಟ್ಟಣ-ರಾಮನಾಥಪುರ ರಸ್ತೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ವೃದ್ಧೆ ಲಕ್ಷ್ಮಮ್ಮ ಬೈಕ್‌ನಿಂದ ಕೆಳಕ್ಕೆ ಬಿದ್ದಿದ್ದಾರೆ. ಇದರಿಂದ ಅವರ ತಲೆ ಹಾಗೂ ಕಾಲಿಗೆ ಪೆಟ್ಟಾಗಿದ್ದು, ಅವರನ್ನು ಕೊಣನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.