ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಡಿ.ಸಿ ಸೂಚನೆ

ಹಾಸನ: ವಿಶೇಷ ಜವಳಿ ಆರ್ಥಿಕ ವಲಯದಲ್ಲಿ ಉಳಿದಿರುವ 40 ಎಕರೆ ಭೂಮಿ ಹಾಗೂ ವಿಶೇಷ ಔಷಧಿ ಆರ್ಥಿಕ ವಲಯದಲ್ಲಿ ಖಾಲಿ ಇರುವ 35 ಎಕರೆ ಭೂಮಿಗೂ ಸಹ ಡಿನೋಟಿಫಿಕೇಷನ್ ಮಾಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉನ್ನತಾಧಿಕಾರದ ಏಕ ಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಯುವ ಜನರಿಗೆ ಭೂಮಿ ಲಭ್ಯವಿಲ್ಲದ ಕಾರಣ ವಿಶೇಷ ಆರ್ಥಿಕ ವಲಯದಲ್ಲಿರುವ ಭೂಮಿಯನ್ನು ಡಿ-ನೋಟಿಫೈ ಮಾಡುವುದು ಅವಶ್ಯಕವಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ರಸ್ತೆಗಳ ದುರಸ್ತಿ ಹಾಗೂ ಹಾಳಾಗಿರುವ ಬೀದಿ ದೀಪದ ವ್ಯವಸ್ಥೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಂಬಂಧ ಮಂಡಳಿಯ ನೀರು ಸರಬರಾಜು ವ್ಯವಸ್ಥೆಯಿಂದ ಪಡೆಯುತ್ತಿರುವ ನೀರಿಗೆ ₹ 6 ಲಕ್ಷ ಶುಲ್ಕವನ್ನು ನಗರ ಸಭೆಯಿಂದ ಪಾವತಿಸುವಂತೆ ತಿಳಿಸಿದರು.
ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಉದ್ಯಮ ಪ್ರಾರಂಭಿಸಲು ಬ್ಯಾಂಕ್‌ಗಳು ಸಾಲ ಮಂಜೂರು ಮಾಡಲು ಕ್ರಮವಹಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಕೈಗಾರಿಕಾ ಕೇಂದ್ರ ವಲಯದಲ್ಲಿ ಉದ್ಯಮ ಪ್ರಾರಂಭಿಸಲು ಅನುಮತಿ ನೀಡುವ ಸಂದರ್ಭದಲ್ಲಿ ನಿಗದಿತ ಸಮಯಕ್ಕೆ ಉದ್ಯಮ ಪ್ರಾರಂಭಿಸಲು ಉದ್ಯಮದಾರರಿಗೆ ಸೂಚನೆ ನೀಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಪ್ರಭಾರಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪುಟ್ಟಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಎಸ್.ಹೆಗ್ಗಡೆ, ಕೆಐಡಿಬಿ ಅಭಿವೃದ್ಧಿ ಅಧಿಕಾರಿ ಕೆ.ಕುಮಾರ್, ನಗರಸಭೆ ಪೌರಾಯುಕ್ತ ಬಿ.ಎ.ಪರಮೇಶ್ ಇದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.