ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಶಾಲೆಗೆ ಲಕ್ಷ ಬಹುಮಾನ: ಗೋಪಾಲಯ್ಯ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಣೆ
Last Updated 17 ಜೂನ್ 2020, 13:35 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ಶಾಲೆಯ ಶಿಕ್ಷಕರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಣೆ ಮಾಡಿದರು.

ನಗರದ ಸಂತ ಜೋಸೆಫ್‌ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಪರಿಶೀಲನೆ ಕುರಿತು ಬುಧವಾರ ಆಯೋಜಿಸಿದ್ದ
ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ ವರ್ಷ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿತ್ತು. ಶಿಕ್ಷಕರು ಹಾಗೂ ಇಲಾಖೆ ಅಧಿಕಾರಿಗಳ ಪರಿಶ್ರಮ ಸಾಕಷ್ಟಿದೆ. ಈ ಬಾರಿಯೂ ಅದೇ ರೀತಿಯ ಫಲಿತಾಂಶ ಮರುಕಳಿಸಲಿ. ಅದಕ್ಕಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಧೈರ್ಯ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಅದೇ ರೀತಿ ಹೆಚ್ಚು ಅಂಕ ಪಡೆದ ಶಾಲೆಯ ಮಕ್ಕಳಿಗೂ ಪ್ರತ್ಯೇಕವಾಗಿ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಪರೀಕ್ಷೆ ಮುಗಿದ ಬಳಿಕ ಶಿಕ್ಷಕರ ಸಮಸ್ಯೆ ಆಲಿಸುವ ಸಲುವಾಗಿ ದಿನಾಂಕ ನಿಗದಿ ಮಾಡಲಾಗುವುದು. ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, ಶಿಕ್ಷಕರು ಮನಸ್ಸು ಮಾಡಿದರೆ ಒಂದು ಕುಟುಂಬ, ರಾಜ್ಯ ಮತ್ತು ದೇಶವನ್ನು ಬದಲಿಸುವ ಶಕ್ತಿ ಇದೆ. ಸರ್ಕಾರ ಮಕ್ಕಳ ಪರವಾಗಿ ಇದೆ ಎಂಬುದನ್ನು ಅರ್ಥ ಮಾಡಿಸಬೇಕು. ಪರೀಕ್ಷೆ ವೇಳೆ ಮಕ್ಕಳು ಮನೆಯಿಂದಲೇ ಊಟ ತರವುದು ಸೂಕ್ತ ಎಂದು ಸಲಹೆ ನೀಡಿದರು.

ಕೊರೊನಾ ಸೋಂಕು ಹೆಚ್ಚುತ್ತಿರುವ ವೇಳೆ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ ಯಶಸ್ವಿಗೊಳಿಸಬೇಕು. ವಿದ್ಯಾರ್ಥಿಗಳ
ಆರೋಗ್ಯದ ದೃಷ್ಠಿಯಿಂದ ಸಾಕಷ್ಟು ಕ್ರಮ ಕೈಗೊಂಡಿದ್ದು, ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಪರೀಕ್ಷೆ ಸಂದರ್ಭದಲ್ಲಿ ಎರಡು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಜಿಲ್ಲೆಯಲ್ಲಿ 510 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿದ್ದು, 89 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಬಾರಿ 21,257 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ. ಪ್ರತಿ ಕೊಠಡಿಯಲ್ಲಿ 18 ರಿಂದ 20 ಜನ ವಿದ್ಯಾರ್ಥಿಗಳು ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಕೊಠಡಿಗಳಿಗೆ ಸ್ಯಾನಿಟೈಸ್‌ ಮಾಡಲಾಗುವುದು. ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು, ಥರ್ಮಲ್‌ ಸ್ಕ್ರೀನಿಂಗ್ ಎಲ್ಲದಕ್ಕೂ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸಾರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್‌.ಪ್ರಕಾಶ್‌ ಮಾತನಾಡಿ, ಪರೀಕ್ಷೆಗೆ ಜಿಲ್ಲೆಯಲ್ಲಿ ಅಗತ್ಯ ತಯಾರಿ
ಮಾಡಿಕೊಳ್ಳಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ, ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ ಬಾರಿ 184 ಶಾಲೆಗಳಲ್ಲಿ ಜಿಲ್ಲೆಯ ಸರಾಸರಿ ಫಲಿತಾಂಶದಲ್ಲಿ ಕಡಿಮೆ ಬಂದಿದೆ. ಅಂತಹ ಶಾಲೆಗಳನ್ನು ಇಲಾಖೆ ಅಧಿಕಾರಿಗಳಿಗೆ ದತ್ತು ನೀಡಿ ಫಲಿತಾಂಶ ಸುಧಾರಣೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಕೌಟ್ಸ್‌, ಗೈಡ್ಸ್‌ ವತಿಯಿಂದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲಾ 9 ಸಾವಿರ ಮಾಸ್ಕ್‌
ಹಸ್ತಾಂತರಿಸಲಾಯಿತು.

ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ್‌ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್‌, ಉಪ ವಿಭಾಗಾಧಿಕಾರಿಗಳಾದ ಗಿರೀಶ್‌ ನಂದನ್‌, ನವೀನ್‌ ಭಟ್‌, ಸ್ಕೌಟ್ಸ್‌, ಗೈಡ್ಸ್‌ ಜಿಲ್ಲಾ ಆಯುಕ್ತ ವೈ.ಎಸ್‌. ವೀರಭದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT