ಶುಕ್ರವಾರ, ಮೇ 7, 2021
19 °C
ಸಿ.ಎಂ, ಆರೋಗ್ಯ ಸಚಿವರ ರಾಜೀನಾಮೆಗೆ ಎಚ್‌.ಕೆ. ಕುಮಾರಸ್ವಾಮಿ ಆಗ್ರಹ

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ, ಕೇಂದ್ರ ವಿಫಲ: ಎಚ್‌.ಕೆ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದರು.

ಕೋವಿಡ್ ಸಮಸ್ಯೆ ದಿನೇ ದಿನೆ ಉಲ್ಬಣವಾಗುತ್ತಿದೆ. ಎರಡೂ ಸರ್ಕಾರಗಳು ಕೈ ಚೆಲ್ಲಿ ಕುಳಿತಿವೆ. ಕೊರೊನಾ ಚಿಕಿತ್ಸೆಗೆ ಅನೇಕ ಕಡೆಗಳಲ್ಲಿ ಕೊರತೆ ಇರುವ ವೈದ್ಯರು, ತಜ್ಞ ವೈದ್ಯರು ಹಾಗೂ ಶುಶ್ರೂಷಕರ ನೇಮಕ ಮಾಡಿಕೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ವೈದ್ಯರು, ಸಿಬ್ಬಂದಿ ಹಾಗೂ ಚಿಕಿತ್ಸಾ ಉಪಕರಣಗಳ ಕೊರತೆ ಇದ್ದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರನ್ನು ಒತ್ತಾಯಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ ಅವರ ವರ್ಗಾವಣೆ ಆದೇಶ ಸರ್ಕಾರ ರದ್ದುಪಡಿಸಿರುವುದು ಸ್ವಾಗತಾರ್ಹ. ಅವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ತೊಂದರೆ ನೀಡಬಾರದು ಎಂದರು.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಕೂಡಲೇ ಪೂರೈಕೆ ಮಾಡಬೇಕು ಹಾಗೂ ದುರುಪಯೋಗವಾಗದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜವಾಬ್ದಾರಿ ವಹಿಸಬೇಕು. ತಾಲ್ಲೂಕು ಆಸ್ಪತ್ರೆಗಳಿಗೆ ₹25 ಲಕ್ಷ ನೀಡುವುದಾಗಿ ಸರ್ಕಾರ ಹೇಳಿದೆ. ಅಗತ್ಯವಿರುವ ಅನುದಾನವನ್ನೂ ಸರ್ಕಾರ ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಕಳೆದ ವರ್ಷ ಘೋಷಣೆ ಮಾಡಿದಂತೆ ಈ ವರ್ಷವೂ ಬಡವರು ಹಾಗೂ ವಿವಿಧ ವರ್ಗಗಳ ಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಪೊಲೀಸರು ಸೇರಿದಂತೆ ಕೊರೊನಾ ವಾರಿಯರ್‌ಗಳಿಗೆ ಆರೋಗ್ಯ ವಿಮೆ ಮಾಡಿಸಬೇಕು. ಸೋಂಕಿತರ ಕುಟುಂಬಗಳಿಗೆ ಕನಿಷ್ಠ ₹1 ಲಕ್ಷ ಆರ್ಥಿಕ ನೆರವು ನೀಡಬೇಕು. ಇಲ್ಲವಾದರೆ ಪಕ್ಷದ ನಾಯಕರ ಜತೆ ಚರ್ಚಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೊರೊನಾ ತಡೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಪಾಲನೆ ಮಾಡುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು ಎಂದು ಮನವಿ ಮಾಡಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ ನಿಜಕ್ಕೂ ವಿಷಾದನೀಯ. ಈ ವಿಷಯದಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದೆ. ತಪ್ಪಿತಸ್ಥರನ್ನು ಕೂಡಲೇ ಅಮಾನತು ಮಾಡುವ ಮೂಲಕ ಕರ್ತವ್ಯಲೋಪ ಎಸಗುವವರಿಗೆ ಎಚ್ಚರಿಕೆ ಪಾಠವಾಗಬೇಕು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ ಇದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು