ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಚತೆ, ಆರೋಗ್ಯಕ್ಕೆ ಆದ್ಯತೆ ನೀಡಿ

ಮಕ್ಕಳಿಗೆ ಓಆರ್‌ಎಸ್‌ ಪೊಟ್ಟಣ ವಿತರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ
Last Updated 3 ಜೂನ್ 2019, 13:36 IST
ಅಕ್ಷರ ಗಾತ್ರ

ಹಾಸನ: ಸ್ವಚ್ಚತೆ ಬಗ್ಗೆ ಗಮನ ಹರಿಸುವುದರ ಜತೆಗೆ ಶುಚಿತ್ವದ ಕುರಿತು ಅರಿವು ಮೂಡಿಸುವ ಮೂಲಕ ಆರೋಗ್ಯದಾಯಕ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಎಂ. ಕೃಷ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಸಂರಕ್ಷಣೆ ಕುರಿತು ಸರ್ಕಾರ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನೇಕ ಕಾರ್ಯಕ್ರಮ ಜಾರಿಗೆ ತಂದಿದ್ದು, ಅವುಗಳು ಆಂದೋಲನದ ರೀತಿಯಲ್ಲಿ ಜಿಲ್ಲೆಯಾದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತಿಸಾರ ಭೇದಿ ವೇಳೆ ಓಆರ್‌ಎಸ್ ಮತ್ತು ಜಿಂಕ್ ಮಾತ್ರೆಗಳ ಬಳಕೆ ಬಗ್ಗೆ ಪ್ರತಿ ಶಾಲೆ ಹಾಗೂ ಅಂಗನವಾಡಿಗಳ ಮಕ್ಕಳಿಗೆ ಮಾಹಿತಿ ನೀಡಬೇಕು. ಸ್ವಚ್ಚತೆ ಹಾಗೂ ಆರೋಗ್ಯ ಕಾಳಜಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, ಆರೋಗ್ಯ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು, ಹಾಸ್ಟೆಲ್‍ಗಳಲ್ಲಿ ನೀರಿನ ಟ್ಯಾಂಕ್‌ಗಳು ಶುದ್ಧವಾಗಿರಬೇಕು. ಶುದ್ಧ ನೀರಿನ ಬಳಕೆ ಜೊತೆಗೆ ಅತಿಸಾರ ಭೇದಿಯ ಸಂದರ್ಭದಲ್ಲಿ ಓ.ಆರ್.ಎಸ್ ಹಾಗೂ ಜಿಂಕ್ ಮಾತ್ರೆಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಆರ್ ಸಿಚ್ ಅಧಿಕಾರಿ ಡಾ. ಜನಾರ್ಧನ್ ಮಾತನಾಡಿ, ಐದು ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ಭೇಟಿ ನೀಡಿ ಶುಚಿತ್ವದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕೈ ತೊಳೆಯುವ ವಿಧಾನಗಳನ್ನು ತಿಳಿಸಿಕೊಡಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಸೂಚಿಸಿದರು.

ಓಆರ್ ಎಸ್ ದ್ರಾವಣದ ಪ್ರಾಮುಖ್ಯತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ, ಓಆರ್ ಎಸ್ ಸಾವಿರಾರು ಜೀವಗಳನ್ನು ಉಳಿಸಿದೆ. ಆದ್ದರಿಂದ ಈ ಔಷಧಿ ಆಸ್ಪತ್ರೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಚಿತವಾಗಿ ಸಿಗುವಂತಾಗಬೇಕು ಎಂದರು.

ಓ.ಆರ್.ಎಸ್ ಪೊಟ್ಟಣವನ್ನು ಜಿಲ್ಲಾಧಿಕಾರಿ ಅವರು ಮಕ್ಕಳಿಗೆ ವಿತರಿಸಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿಗಳ ತಂಡ ಕೈ ತೊಳೆಯುವ ಪ್ರಾತ್ಯಕ್ಷಿಕೆ ನಡೆಸಿಕೊಟ್ಟಿತು.

ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜ್ ಗೋಪಾಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ಎಂ.ಕೃಷ್ಣ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ವಿಜಯಕುಮಾರಿ, ಕಾರ್ಯಕ್ರಮ ಅಧಿಕಾರಿ ಡಾ. ಹೇಮಲತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT