ಶುಕ್ರವಾರ, ನವೆಂಬರ್ 27, 2020
18 °C
ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಲಿಂಗೇಶ್‌ ಅಧಿಕಾರಿಗಳಿಗೆ ಸೂಚನೆ

ಕೆರೆ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳಿ: ಶಾಸಕ ಕೆ.ಎಸ್‌.ಲಿಂಗೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ‘ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿ, ಕೆರೆ, ಕಟ್ಟೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಜರುಗಿಸುವಂತೆ’ ಶಾಸಕ ಕೆ.ಎಸ್‌.ಲಿಂಗೇಶ್‌ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕೃಷಿ ಇಲಾಖೆಯ ಯಂತ್ರೋಪಕರಣ ಖರೀದಿ ಯೋಜನೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಇದು ನಿಲ್ಲಬೇಕು.  ಪೋಡಿಮುಕ್ತ ಗ್ರಾಮ, ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂತಹ ಕೆಲಸವನ್ನು ತಾಲ್ಲೂಕು ಕಚೇರಿ ಅಧಿಕಾರಿಗಳು ಮಾಡಬೇಕು’ ಎಂದರು.

‘ಸ್ಮಶಾನ ಇಲ್ಲದ ಗ್ರಾಮಗಳಿಗೆ ಜಾಗ ನೀಡಬೇಕು. ಅದಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರರಿಗೆ ಮಾಹಿತಿ ನೀಡಬೇಕು.  94/ಸಿ ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಲು ತಹಶೀಲ್ದಾರ್  ಮುಂದಾಗಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ರೇಬಿಸ್, ಹಾವು ಕಡಿತಕ್ಕೆ ನೀಡುವ ಇಂಜಕ್ಷನ್‌  ದಾಸ್ತಾನು ಇರಬೇಕು. ವೈದ್ಯರು, ದಾದಿಯರು ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಕಡ್ಡಾಯವಾಗಿ ಎನ್ 95 ಮಾಸ್ಕ್ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ನೀಡಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಯ್ಯದ್ ತೌಫಿಕ್ ಮಾತನಾಡಿ, ‘ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಸಂಬಂಧಿಸಿದ 5 ಇಂಜೆಕ್ಷನ್‌ ದಾಸ್ತಾನು ಇರಬೇಕು. ಇದರಿಂದ ರೋಗಿಗಳ ಜೀವ ಉಳಿಸಲು ಸಹಾಯವಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಐದಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು. 

ಜಿಲ್ಲಾ  ಪಂಚಾಯಿತಿ ಸದಸ್ಯರಾದ ಲತಾ ಮಂಜೇಶ್ವರಿ, ಲತಾ ದಿಲೀಪ್, ತಾಲ್ಲೂಕು ಪಂಚಾಯಿತಿ  ಅಧ್ಯಕ್ಷೆ ಇಂದಿರಾ ರವಿಕುಮಾರ್, ಉಪಾಧ್ಯಕ್ಷೆ ಜಮುನಾ ಅಣ್ಣಪ್ಪ, ಎಪಿಎಂಸಿ ಅಧ್ಯಕ್ಷ ಸಿ.ಎಚ್.ಮಹೇಶ್, ತಹಶೀಲ್ದಾರ್ ನಟೇಶ್, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ಹಾಜರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.