ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Published 1 ಜನವರಿ 2024, 14:37 IST
Last Updated 1 ಜನವರಿ 2024, 14:37 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳಡಿ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ಸಂತ್ರಸ್ತರ ಪುನರ್ವಸತಿ ಕಾಲೊನಿಗೆ ನಿವೇಶನ ಹಕ್ಕುಪತ್ರ ನೀಡಲು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ’ ತಿಳಿಸಿದರು.

‘ಸಭೆಯಲ್ಲಿ ಚರ್ಚಿಸಿದಂತ ವಿಷಯಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ಹಾಸ್ಟೆಲ್‌ಗಳಲ್ಲಿರುವ ಮಕ್ಕಳಿಗೆ ತಿಳಿವಳಿಕೆ ನೀಡಬೇಕು. ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ವಿದ್ಯಾಭ್ಯಾಸ ಮಾಡಿ ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ನೀತಿ ಪಾಠ ಹೇಳಿ ಜಾಗೃತಿ ಮೂಡಿಸಬೇಕು ಎಂದು ಸಮಿತಿ ಸದಸ್ಯರು ತಿಳಿಸಿದರು.

ಒಳ್ಳೆಯದಕ್ಕಿಂತ ಕೆಟ್ಟ ವಿಷಯಗಳಿಗೆ ಬೇಗ ಆಕರ್ಷಣೆಗೆ ಒಳಗಾಗಿ ದಾರಿ ತಪ್ಪುತ್ತಿದ್ದಾರೆ. ಮನಸ್ಸು ಪರಿವರ್ತನೆಯಾಗಿ ಓದುವ ಛಲ ಬೆಳೆಸಿಕೊಳ್ಳುವಂತೆ ತಿಳಿವಳಿಕೆ ನೀಡಿ ಎಂದರು.

ಅಂಗಡಿಹಳ್ಳಿ ಗ್ರಾಮದಲ್ಲಿ ಒಂದು ದಿನ ವಾಸ್ತವ್ಯ ಆಯೋಜಿಸುವುದರ ಜೊತೆಗೆ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸುವಂತೆ ಅಧಿಕಾರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ, ‘ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಈ ಜಾಗಕ್ಕೆ ಬೇಲಿ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ’ ತಿಳಿಸಿದರು.

ಹಿಮ್ಸ್ ನಿರ್ದೇಶಕ ಡಾ.ಸಂತೋಷ, ಉಪ ವಿಭಾಗಾಧಿಕಾರಿ ಶ್ರುತಿ, ಸಮಾಜ ಕಲ್ಯಾಣಕ್ಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ, ಸಮಿತಿ ಸದಸ್ಯರಾದ ಮರಿಜೋಸೆಫ್, ವಿಜಯ ಕುಮಾರ್, ಕೃಷ್ಣದಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Cut-off box - ಪೌರಕಾರ್ಮಿಕರ ನಿವೇಶನ ರಚನೆಗೆ ಕ್ರಮ ಕೈಗೊಳ್ಳಿ ‘ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ ಕಾದಿರಿಸಿರುವ ಜಾಗಕ್ಕೆ ನಿವೇಶನ ರಚಿಸಿ ವಿನ್ಯಾಸ ಅನುಮೋದನೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ’ ಜಿಲ್ಲಾಧಿಕಾರಿ ಸತ್ಯಭಾಮಾ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಸಲಕರಣೆ ಬೆಳಗಿನ ಉಪಾಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ವಸ್ತ್ರ ಬದಲಾವಣೆ ಮಾಡಿಕೊಳ್ಳಲು ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು. ಸಕಲೇಶಪುರ ಸುಭಾಷ ಮೈದಾನದ ಬಳಿಯಿರುವ ಹಿಂದೂ ಸ್ಮಶಾನಕ್ಕೆ ರಸ್ತೆ ಮಾಡಿಕೊಡುವಂತೆ’ ಅಧಿಕಾರಿಗಳಿಗೆ ಸೂಚಿಸಿದರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ ‘ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಮತ್ತು ಹಿರೀಸಾವೆ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಅಕ್ಟೋಬರ್ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನ ವೇತನ ಪಾವತಿಸಲು’ ಸೂಚಿಸಿದರು. ಉಪ ವಿಭಾಗಾಧಿಕಾರಿ ಶ್ರುತಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್ ಸಮಿತಿ ಸದಸ್ಯರಾದ ಪಳನಿ ಶಂಕರ್ ಶ್ರೀನಿವಾಸ್ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT