ಸೋಮವಾರ, ಸೆಪ್ಟೆಂಬರ್ 16, 2019
27 °C
ಕೇಂದ್ರ ಸರ್ಕಾರಕ್ಕೆ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಸಲಹೆ

ತನಿಖಾ ಸಂಸ್ಥೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಿ

Published:
Updated:
Prajavani

‌ಹಾಸನ: ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಸಲಹೆ ನೀಡಿದರು.

ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್‌ ಅವರ ಬಂಧನ ರಾಜಕೀಯ ಪ್ರೇರಿತ ಕ್ರಮವಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಹಣೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಚು ಮಾಡಿವೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಈ ಪ್ರಕರಣ ಎರಡು ವರ್ಷ ಹಳೆಯದಾಗಿದ್ದು, ತನಿಖೆಗೆ ಕಾನೂನು ವ್ಯಾಪ್ತಿಯಲ್ಲಿ ಸಹಕಾರ ನೀಡುತ್ತಿದ್ದರು. ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಲ್ಕು ದಿನ ತನಿಖೆಗೆ ಒಳಪಡಿಸಿ, ನಂತರ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಸರಿಯಲ್ಲ. ಹಬ್ಬದ ದಿನದಲ್ಲೂ ಬಿಡುವು ನೀಡಿಲ್ಲ ಮತ್ತು ವೈದ್ಯಕೀಯ ಸೌಲಭ್ಯ ಸಹ ಕಲ್ಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇ.ಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ. ಇವುಗಳ ಮೇಲೆ ಒತ್ತಡ ಹೇರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದರು.

ಹಿಂದಿನ ಸಮ್ಮಿಶ್ರ ಸರ್ಕಾರ ಮಾಡಿದ ₹48 ಸಾವಿರ ಕೋಟಿ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಯಾಗಲು ಬಿಜೆಪಿ ಸರ್ಕಾರ ಬಿಡುತ್ತಿಲ್ಲ. ಎಚ್‌.ಡಿ.ಕುಮಾರಸ್ವಾಮಿಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ. ಹಿಂದಿನ ಸರ್ಕಾರದ ಜನಪರ ಯೋಜನೆಗಳನ್ನು ಕಡ್ಡಾಯವಾಗಿ ಅನುಷ್ಠಾಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಜನ ವಿರೋಧಿ ಕೆಲಸ ಮಾಡುತ್ತಿದೆ. ಮಾಡಬೇಕಾದ ಕೆಲಸ ಬಿಟ್ಟು ಎಲ್ಲಾ ಕೆಲಸ ಮಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಹೊಂಗೆರೆ ರಘು, ತಾಲ್ಲೂಕು ಘಟಕದ ಅಧ್ಯಕ್ಷ ದ್ಯಾವೇಗೌಡ ಇದ್ದರು.

Post Comments (+)