ಸೋಮವಾರ, ಏಪ್ರಿಲ್ 12, 2021
28 °C

ತನಿಖೆ ಬಳಿಕ ಸಿ.ಡಿ ಬಗ್ಗೆ ಸತ್ಯಾಂಶ ತಿಳಿಯಲಿದೆ: ಸಚಿವ ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗಾಗಿ ಬೆಂಗಳೂರು ಹೆಚ್ಚುವರಿ ಪೊಲೀಸ್‌ ಕಮಿಷನ್‌ ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿದ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ತನಿಖೆ ಆರಂಭಗೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಅಲ್ಲಿವರೆಗೂ ಕಾಯಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ತಂಡಕ್ಕೆ ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ ತನಿಖಾ ಹಂತದಲ್ಲಿ ಈ ವಿಚಾರ
ಮಾತನಾಡುವುದು ಸರಿಯಲ್ಲ ಎಂದರು.

ಎಸ್‌ಐಟಿ ತನಿಖೆ ಕುರಿತು ವಿರೋಧ ಪಕ್ಷಗಳ ನಾಯಕರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವರು, ವಿಶೇಷ ತನಿಖಾ ತಂಡದ ಮೇಲೆ ವಿಶ್ವಾಸ ಇಟ್ಟುಕೊಳ್ಳಬೇಕು. ತನಿಖೆಗೂ ಮುನ್ನವೇ ನಿರ್ಧಾರಕ್ಕೆ ಬರಬಾರದು ಎಂದರು.

ಹಾಸನ ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ವಿ. ಸುನಿಲ್‌ ಮತ್ತು ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ್ ಅವರು ಕಾನೂನು ಮೀರಿ ಕೆಲಸ ಮಾಡಿರುವ ವಿಚಾರ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಅರ್ಧ ತಾಸು ಚರ್ಚೆ ಆಗಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಹಕಾರ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್‌ನಿಂದ ದೇಶ ತತ್ತರಿಸಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗಿದೆ. ಈಗ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಬೆಂಗಳೂರು ಸೇರಿದಂತೆ ಕೆಲವು ಕಡೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್‌ ನಿಯಂತ್ರಣಕ್ಕೆ ಬಂದಿರುವ ಕಡೆ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು