ಮಂಗಳವಾರ, ಮಾರ್ಚ್ 21, 2023
30 °C
ಅತಿವೃಷ್ಟಿಯಿಂದ 78 ಮನೆಗಳಿಗೆ ಭಾಗಶಃ ಹಾನಿ

ಶಿರಾಡಿ ಘಾಟ್‌ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ: ಸಚಿವ ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 78 ಮನೆಗಳು ಭಾಗಶಃ ಹಾಗೂ 6 ಮನೆಗಳು ಸಂಪೂರ್ಣ ಹಾನಿಯಾಗಿವೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದರು. 

ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಶನಿವಾರ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ಪ್ರಜ್ವಲ್‌ ರೇವಣ್ಣ ಅವರೊಂದಿಗೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 50 ಸೇತುವೆಗಳು 374 ವಿದ್ಯುತ್ ಕಂಬಗಳು ಹಾನಿಯಾಗಿವೆ. ಐದು ಜಾನುವಾರುಗಳು ಮೃತಪಟ್ಟಿದ್ದು, ತಕ್ಷಣ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದರು.

ಭೂ ಕುಸಿತ ಮತ್ತಿತರ ಸ್ವರೂಪದ ಹಾನಿಯಾಗುವ ಸಾಧ್ಯತೆ ಇರುವ 95 ಗ್ರಾಮಗಳನ್ನು ಗುರುತಿಸಿ ಮುಂಜಾಗ್ರತೆ ವಹಿಸಲಾಗಿದೆ. 25 ಗ್ರಾಮಗಳನ್ನು ಸ್ಥಳಾಂತರಿಸಲು ಹಾಗೂ ಅಗತ್ಯವಿರುವ ಕಡೆ ತಾತ್ಕಾಲಿಕ ಆಶ್ರಯ ಕೇಂದ್ರ ಪ್ರಾರಂಭಿಸಿ ಆಹಾರ ಹೊದಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೀಡಲು ಸೂಚಿಸಲಾಗಿದೆ. ಸಂಪೂರ್ಣವಾಗಿ ಹಾನಿಯಾಗಿದ್ದಲ್ಲಿ ಉಚಿತ ಮನೆ ನಿರ್ಮಿಸಿ ಕೊಡಲು ಕ್ರಮವಹಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ದೋಣಿಗಾಲ್‌ ಬಳಿಯ ಭೂ ಕುಸಿತವಾಗಿರುವ ರಸ್ತೆಯನ್ನು ಶೀಘ್ರ ದುರಸ್ತಿ ಪಡಿಸುವಂತೆ ಸೂಚಿಸಲಾಗಿದೆ. ಮಂಗಳೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದ್ದಾಗಿರುವುದರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವವರೆಗೂ ಬೆಳಗಿನ ವೇಳೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವನ್ನು ನೀಡಲು ಸೂಚಿಸಲಾಗಿದೆ. ಇತರೆ ವಾಹನಗಳಿಗೆ ಬದಲಿ ರಸ್ತೆಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

‘ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಜೊತೆಗೆ ಕಾಂಕ್ರಿಟ್‌ ತಡೆಗೋಡೆ ನಿರ್ಮಿಸಿ ಶಾಶ್ವತವಾಗಿ ನಾಲ್ಕು‌ಪಥದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ಭೂಕುಸಿತದಿಂದ ಉಂಟಾಗಿರುವ ಜಮೀನು ಹಾನಿ ಮತ್ತು ಬೆಳೆ‌ ಹಾನಿಗೆ ಕಂದಾಯ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ನಿಧಿಯಿಂದ ಪರಿಹಾರ ನೀಡಲಾಗುವುದು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ರಜೆಗೆ ಅವಕಾಶ ನೀಡುವಂತಿಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಅನೆ ಹಾವಳಿ ನಿಯಂತ್ರಣ ಮತ್ತಿತರ ಸ್ಥಳೀಯ ಸಮಸ್ಯೆಗಳ ಕುರಿತು ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು 15 ದಿನದೊಳಗೆ ಸಭೆ ನಡೆಸಲಾಗುವುದು ಎಂದರು.

ಸಚಿವ ಕೆ.ಗೋಪಾಲಯ್ಯ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿಯನ್ನು ತ್ವರಿತವಾಗಿ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಮಳೆಯಿಂದ ಹಾನಿಯಾಗಿರುವ ಮನೆಗಳನ್ನು ಗುರುತಿಸಿ ಪರಿಹಾರ ನೀಡುವ ಕಾರ್ಯವನ್ನು ಜಿಲ್ಲಾಧಿಕಾರಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಇದೇ ವೇಳೆ ಪ್ರಜ್ವಲ್ ರೇವಣ್ಣ ಸಹ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ತುರ್ತಾಗಿ ರಸ್ತೆ ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಬೆಳೆ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಚ್.ಕೆ ಕುಮಾರಸ್ವಾಮಿ ‌ಸಹ ತುರ್ತಾಗಿ ದುರಸ್ತಿ ಕಾಮಾಗಾರಿ‌ ನಡೆಸಿ, ಶೀಘ್ರ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಆರ್. ಗಿರೀಶ್, ಪೋಲಿಸ್ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸಗೌಡ ,ಜಿಲ್ಲಾ  ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಪ್ರತೀಕ್ , ತಹಶೀಲ್ದಾರ್ ಜೈಕುಮಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು