ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್‌ಗೆ ಆಗ್ರಹ

ಹೇಮಾವತಿ ಪ್ರತಿಮೆ ಎದುರು ವಿವಿಧ ಸಂಘಟನೆಗಳ ಪ್ರತಿಭಟನೆ
Last Updated 26 ಮಾರ್ಚ್ 2021, 14:34 IST
ಅಕ್ಷರ ಗಾತ್ರ

ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿವಿಧ ಸಂಘಟನೆಗಳು ನಗರದ ಹೇಮಾವತಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದವು.

ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ ಸಂಘಟನೆಗಳು ಪ್ರತಿಮೆ ಬಳಿ ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದವು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವ ಕಾನೂನು ಜಾರಿಯಾಗಬೇಕು. ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ವಿದ್ಯುತ್ ಮಸೂದೆ 2020 ವಾಪಸ್‌ ಪಡೆದು ಎಲ್ಲಾ ಕೃಷಿ ಉತ್ಪನ್ನಗಳಿಗೆ ಡಾ. ಎಂ. ಎಸ್. ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡಲು ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನಾಲ್ಕು ತಿಂಗಳು ತುಂಬಿದೆ. ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಬೇಡಿಕೆಗಳ ಜೊತೆಗೆ ರಾಜ್ಯ ಸರ್ಕಾರದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳ ತಿದ್ದುಪಡಿಗಳನ್ನು ವಾಪಸ್‌ ಪಡೆಯಬೇಕು ಎಂದರು.

ರೈತರು, ಪರಿಶಿಷ್ಟ ಜಾತಿ, ವರ್ಗದವರು, ಕಾರ್ಮಿಕರು, ವಿದ್ಯಾರ್ಥಿ, ಯುವ ಜನರು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಜ್ವಲಂತ ಬೇಡಿಕೆಗಳಾದ ಭೂಮಿ, ಮನೆ ನಿವೇಶನ, ಬೆಳೆ ವಿಮೆ, ನೆರೆ ಪರಿಹಾರ, ಉದ್ಯೋಗ ಖಾತ್ರಿ ಯೋಜನೆ, ಹೈನುಗಾರಿಕೆ, ಕನಿಷ್ಠ ವೇತನ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಬಜೆಟ್‍ನಲ್ಲಿ ಅಗತ್ಯ ಹಣಕಾಸು ಮೀಸಲಿಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಾಬು, ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎಚ್.ಆರ್.ನವೀನ್‍ಕುಮಾರ್, ಮುಖಂಡರಾದ ಕೃಷ್ಣದಾಸ್ ಮತ್ತು ಅಂಬುಗ ಮಲ್ಲೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪ, ಅರವಿಂದ್, ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ.ಡೋಂಗ್ರೆ, ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ ಮುಬಷಿರ್ ಅಹಮದ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT