ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕೋರ್ಸ್‌ ಶುಲ್ಕ ಹೆಚ್ಚಳಕ್ಕೆ ವಿರೋಧ

ಜಿಲ್ಲಾಧಿಕಾರಿ ಕಚೇರಿ ಎಬಿವಿಪಿ ಎದುರು ಪ್ರತಿಭಟನೆ
Last Updated 21 ಡಿಸೆಂಬರ್ 2018, 12:58 IST
ಅಕ್ಷರ ಗಾತ್ರ

ಹಾಸನ : ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸಬೇಕು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಬಂದು ಮನವಿ ಅರ್ಪಿಸಿದರು.

‘ಸಚಿವ ಎನ್.ಮಹೇಶ್ ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಈ ವರೆಗೂ ಯಾರನ್ನು ನೇಮಿಸಿಲ್ಲ. ಎರಡು ವರ್ಷಗಳ ಹಿಂದೆ ಪಿಯುಸಿ ಪರೀಕ್ಷಾ ಮಂಡಳಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ತೀವ್ರ ಮುಖಭಂಗ ಅನುಭವಿಸಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಗೊಂದಲ, ಆತಂಕ ಉಂಟಾಗಿತ್ತು. ಸಾರಥಿ ಇಲ್ಲದೆ ಶಿಕ್ಷಣ ಇಲಾಖೆ ಆಡಳಿತ ನಡೆಸಿಕೊಂಡು ಹೋಗುತ್ತಿರುವುದು ಖಂಡನೀಯ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘2018–19ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಮೂರು ಪಟ್ಟು ಹೆಚ್ಚು ಮಾಡಿ ಬಡ ವಿದ್ಯಾರ್ಥಿಗಳು ವೈದ್ಯಕೀಯ ರಂಗದ ಕನಸಿನಿಂದ ದೂರವಿಡುತ್ತಿರುವ ಸರ್ಕಾರದ ಕ್ರಮ ಸರಿಯಾದುದಲ್ಲ. ಕಳೆದ ವರ್ಷ ವೈದ್ಯಕೀಯ ಕೋರ್ಸ್ ಗಳಿಗೆ ₹ 16,700 ಇದ್ದ ಶುಲ್ಕವನ್ನು ಪ್ರಸ್ತುತ ₹ 50,000ಕ್ಕೆ ಏರಿಕೆ ಮಾಡಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳಿಗೆ ₹ 77,000 ಇದ್ದ ಶುಲ್ಕವನ್ನು ₹ 97,350ಕ್ಕೆ ಹೆಚ್ಚಿಸಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸೀಟ್ ಗಳಿಗೆ ₹ 6,32,500 ಶುಲ್ಕವನ್ನು ₹ 6,83,100ಕ್ಕೆ ಏರಿಕೆ ಮಾಡಲಾಗಿದೆ’ ಎಂದು ದೂರಿದರು.

ಸರ್ಕಾರಿ ದಂತ ವೈದ್ಯಕೀಯ ಕಾಲೇಜುಗಳಲ್ಲಿ ₹ 14,400 ಇದ್ದ ಶುಲ್ಕವನ್ನು ₹ 40,000ಕ್ಕೆ ಏರಿಕೆ ಮಾಡಲಾಗಿದೆ. ಖಾಸಗಿ ಕಾಲೇಜಿನಲ್ಲಿ ಸರ್ಕಾರಿ ಸೀಟುಗಳಿಗೆ ₹ 49,500 ಇದ್ದ ಶುಲ್ಕವನ್ನು ₹ 63,030ಕ್ಕೆ ಏರಿಕೆ ಮಾಡಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ₹ 4,29,000 ಇದ್ದ ಶುಲ್ಕವನ್ನು ₹ 4,63,320ಕ್ಕೆ ಹೆಚ್ಚಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘2016ನೇ ಸಾಲಿನ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದಡಿ ಬಂಧಿತನಾಗಿದ್ದ ಶಿವಕುಮಾರ್ ಗೆ ಶಿಕ್ಷೆಯಾಗಿಲ್ಲ. ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬಂಧಿತನಾಗಿದ್ದಾನೆ. ಈ ರೀತಿ ಶಿಕ್ಷಣದ ಪಾವಿತ್ರ್ಯತೆ ಹಾಳು ಮಾಡುತ್ತಿರುವ ಶಿವಕುಮಾರ್ ಮೇಲೆ ಸರ್ಕಾರ ಮೃದು ಧೋರಣೆ ತೋರುತ್ತಿರುವುದು ಖಂಡನೀಯ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮರುಕಳಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ಕಂದನ್ ಕುಮಾರ್, ಕಾರ್ಯಕರ್ತರಾದ ಕಾಂತರಾಜ್, ಸುಹಾಸ್, ಸತೀಶ್, ದರ್ಶನ್, ಕಿಶೋರ್, ಪದ್ಮರಾಜ್‌ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT