ಬೇಲೂರು: ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಳ್ಳಿ ಗದ್ದೆ ಗ್ರಾಮದಲ್ಲಿ 20 ಕಾಡಾನೆಗಳ ಹಿಂಡು ಭತ್ತದ ಬೆಳೆಯನ್ನು ನಾಶಪಡಿಸಿವೆ.
ಬಿಕ್ಕೋಡು ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ರೈತರು ಆತಂಕದಲ್ಲಿ ಕಾಲ ಕಳೆಯುವಂತೆ ಆಗಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದರೂ ಆನೆ ಓಡಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿ ಯತೀಶ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.
ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಿಡಿಯುವ ಭರವಸೆ ನೀಡುತ್ತ ಕಾಲಹರಣ ಮಾಡುತ್ತಿದ್ದೀರೆಯೇ ಹೊರತು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಆನೆಗಳ ದಾಳಿಯಿಂದ ಬೆಳೆ ನಷ್ಟವಾಗಿದ್ದರೂ ಬೇಕಾಬಿಟ್ಟಿ ಪರಿಹಾರ ನೀಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಮಿತಿಮಿರಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಬಾರಿ ಶಾಸಕ ಎಚ್.ಕೆ. ಸುರೇಶ್ ಹಾಗೂ ಅರಣ್ಯಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೆಡಿಪಿ ಸದಸ್ಯ ಸಿ.ಚೇತನ್ ಗೌಡ ಅರೋಪಿಸಿದರು.