ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸಬಲೀಕರಣಕ್ಕೆ ಆದ್ಯತೆ ಅಗತ್ಯ

ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಧೀಶೆ ವಿಜಯಲಕ್ಷ್ಮಿದೇವಿ
Last Updated 8 ಡಿಸೆಂಬರ್ 2022, 4:28 IST
ಅಕ್ಷರ ಗಾತ್ರ

ಹಾಸನ: ದೇಶದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದ್ದರೂ, ಕೇವಲ ಕಾಗದಕ್ಕೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇನ್ನೂ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಅಂಥವರಿಗೆ ಕಾನೂನಿನ ನೆರವು ನೀಡುವ ಮೂಲಕ ಎಲ್ಲ ರೀತಿಯಿಂದಲೂ ಸಬಲರನ್ನಾಗಿ ಮಾಡುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ವಿಜಯಲಕ್ಷ್ಮಿದೇವಿ ಎಲ್. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಕೀಲರ ಸಂಘಗಳ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯಗಳ ಆವರಣದ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ‘ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005’ ಅನುಷ್ಠಾನದ ಕುರಿತು ಸಂರಕ್ಷಣಾಧಿಕಾರಿಗಳು ಮತ್ತು ಇತರೆ ಭಾಗೀದಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೌಟುಂಬಿಕ ವ್ಯವಸ್ಥೆಯಲ್ಲಿ ಮಹಿಳೆಯು ದೈಹಿಕ, ಮಾನಸಿಕ, ಆರ್ಥಿಕ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೂ ಅರಿವು ಮೂಡಿಸುವ ಮೂಲಕ ಪುರುಷರಿಗೆ ಮತ್ತು ಮಹಿಳೆಯರಿಗೆ ಸಮಾನ ಹಕ್ಕು ದೊರೆಯುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ನೊಂದ ಮಹಿಳೆಯರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು/ ಕಾರ್ಯವೈಖರಿಯನ್ನು ಚುರುಕುಗೊಳಿಸಿ, ನಿಯಮಾನುಸಾರ ಮತ್ತು ಜವಾಬ್ದಾರಿಯುತವಾಗಿ ಕರ್ತವ್ಯ ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಸಂವಿಧಾನ ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಠ ಗ್ರಂಥವಾಗಿದ್ದು, ಕಾನೂನು ಎಲ್ಲರಿಗೂ ಸಮಾನ ಹಕ್ಕುಗಳನ್ನೂ ನೀಡಿದೆ. ಆದರೆ ಅದನ್ನು ಚಲಾಯಿಸುವುದನ್ನು ಕಲಿಯಬೇಕು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಪೂರ್ಣಚಂದ್ರತೇಜಸ್ವಿ ಮಾತನಾಡಿ, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವಕೀಲರ ಸಂಘದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ದಿಲೀಪ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ವಿ.ಗೀತಾ, ವಕೀಲರಾದ ಚಂದ್ರಶೇಖರ್, ಗಿರಿಜಾಂಬಿಕಾ, ಬಿಂದೇಶ್ವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

‘ಉಚಿತ ಕಾನೂನು ನೆರವು’

ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಉಚಿತವಾಗಿ ಕಾನೂನು ನೆರವು ನೀಡಲು ಅವಕಾಶವಿದ್ದು, ಅಧಿಕಾರಿಗಳು ಇದರ ಬಗ್ಗೆ ಸಾರ್ವನಿಕರಿಗೆ ಮಾಹಿತಿ ಒದಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ. ರವಿಕಾಂತ್ ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಮಹಿಳೆಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನುರಿತ ವಕೀಲರನ್ನು ನೇಮಿಸಿ ಕೊಡುವ ಮೂಲಕ ಅವರ ತೊಂದರೆಯನ್ನು ಶೀಘ್ರ ಪರಿಹರಿಸಲು ಸಹಕಾರಿ ಆಗಲಿದೆ. ಈ ಸೇವೆಯನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT