ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ 3,840 ವಿದ್ಯಾರ್ಥಿಗಳು ನೋಂದಣಿ: ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ

ಆ.28 ಹಾಗೂ 29ರಂದು ಸಾಮಾನ್ಯ ಪ್ರವೇಶ ಪರೀಕ್ಷೆ
Last Updated 18 ಆಗಸ್ಟ್ 2021, 14:08 IST
ಅಕ್ಷರ ಗಾತ್ರ

ಹಾವೇರಿ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಆ.28 ಹಾಗೂ 29ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2021) ನಡೆಯಲಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವ್ಯಕ್ತಿಗತ ಅಂತರ, ಮಾಸ್ಕ್‌ ಧಾರಣೆ, ಜ್ವರ ತಪಾಸಣೆ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪರೀಕ್ಷಾ ಮೇಲ್ವಿಚಾರಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಿಇಟಿ ಪರೀಕ್ಷೆ ಕುರಿತಂತೆ ಪೂರ್ವ ಸಿದ್ಧತೆ ಸಭೆ ನಡೆಸಿದ ಅವರು ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ಇಚ್ಛಿಸಿದಲ್ಲಿ ಕಡ್ಡಾಯವಾಗಿ ಆಯಾ ತಾಲ್ಲೂಕು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ಜಿಲ್ಲಾಧಿಕಾರಿಗೆ ಮುಂಚಿತವಾಗಿ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ 3,840 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಹಾವೇರಿಯಲ್ಲಿ 6, ಹಿರೇಕೆರೂರಿನಲ್ಲಿ 2 ಹಾಗೂ ರಾಣೇಬೆನ್ನೂರಿನ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತಲಾ 24 ವಿದ್ಯಾರ್ಥಿಗಳಿಗೆ ಒಬ್ಬರಂತೆ 160 ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳು:ಹಾವೇರಿ ನಗರದ ಜಿ.ಎಚ್. ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆ, ಎಸ್.ಎಂ.ಎಸ್.ಪದವಿ ಪೂರ್ವ ಕಾಲೇಜು, ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜು, ಹಿರೇಕೆರೂರು ಪಟ್ಟಣದ ಸಿ.ಇ.ಎಸ್ ಕೆ.ಎಚ್. ಪಾಟೀಲ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ರಾಣೆಬೆನ್ನೂರು ನಗರದ ರಾಜರಾಜೇಶ್ವರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ಹಾಗೂ ಹೊಸಮನಿ ಸಿದ್ದಪ್ಪ ಪದವಿ ಪೂರ್ವ ಕಾಲೇಜು‌ಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ತ್ರಿ ಸದಸ್ಯ ಸಮಿತಿ:ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸಿ ಠೇವಣಿ ಮಾಡಲು ಕ್ರಮವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರ ನೇಮಕ ಮಾಡಿ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಕ್ರಮವಹಿಸಬೇಕು. ಪೊಲೀಸ್ ಬಂದೋಬಸ್ತ್, ವೈದ್ಯಾಧಿಕಾರಿಗಳ ನೇಮಕ ಸೇರಿದಂತೆ ಎಲ್ಲ ಪೂರ್ವ ಸಿದ್ಧತೆಗಳನ್ನು ನಡೆಸಬೇಕು.ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಬ್ಯೂಟೂತ್, ವೈರ್‌ಲೆಸ್‌ ಸೆಟ್, ಲಾಗ್ ಟೇಬಲ್ ಸೇರಿದಂತೆ ಅತ್ಯಾಧುನಿಕ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ತರುವುದು ನಿಷೇಧ.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್‌ ಗಿರೀಶ ಸ್ವಾದಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಉಮೇಶಪ್ಪ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT