ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ನೀಡದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ತೀವ್ರ ಅಸಮಾಧಾನ

ವರದಿ ಸಲ್ಲಿಸದ ಹತ್ತು ಇಲಾಖೆಗಳ ಅಧಿಕಾರಿಗಳು
Last Updated 3 ಸೆಪ್ಟೆಂಬರ್ 2021, 13:27 IST
ಅಕ್ಷರ ಗಾತ್ರ

ಹಾವೇರಿ: ಅನುಸೂಚಿತ ಜಾತಿಗಳ ಮತ್ತು ಬುಡಕಟ್ಟು ಉಪಯೋಜನೆಯಡಿ ವಿವಿಧ ಇಲಾಖೆಯಡಿ ಕೈಗೊಳ್ಳಲಾದ ಕಾರ್ಯಕ್ರಮಗಳ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಆಯಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಖಡಕ್ ಸೂಚನೆ ನೀಡಿದರು.

ದೇವಗಿರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶೇಷ ಘಟಕ ಮತ್ತು ಬುಡಕಟ್ಟು ಉಪಯೋಜನೆಯಡಿ ವಿವಿಧ 37 ಇಲಾಖೆಗಳು ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪ್ರತಿ ತಿಂಗಳು ಐದನೇ ತಾರೀಖಿನೊಳಗಾಗಿ ಸಾಧನೆಯ ಮಾಹಿತಿ ನೀಡುವಂತೆ ಲಿಖಿತ ಸೂಚನೆ ನೀಡಿದ್ದರೂ ಹತ್ತಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ವರದಿ ಸಲ್ಲಿಸದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೆಲವು ಅಧಿಕಾರಿಗಳು ಸಭೆಗೆ ಗೈರಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಅಧಿಕಾರಿಗಳ ಮೇಲೆ ಎಸ್.ಸಿ., ಎಸ್.ಟಿ. ಅಧಿನಿಯಮ 2013ರನ್ವಯ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದರು.

ಅನುದಾನ ದುರ್ಬಳಕೆ:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ವಿಶೇಷ ಘಟಕ ಮತ್ತು ಬುಡಕಟ್ಟು ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಆಯಾ ಜನಾಂಗದ ಅಭಿವೃದ್ಧಿಗಾಗಿ ಬಳಕೆ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೊನಿಯ ಅಭಿವೃದ್ಧಿಗಾಗಿ ಮಂಜೂರಾದ ಕಾಮಗಾರಿಗಳ ಅನುದಾನದಲ್ಲಿ ಸಾಮಾನ್ಯ ವರ್ಗದ ಕಾಲೊನಿಗಳಲ್ಲಿ ಕಾಮಗಾರಿ ಕೈಗೊಂಡಿರುವ ದೂರುಗಳು ಬರುತ್ತಿವೆ. ಈ ರೀತಿ ಆಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೈಮಾಸ್ಟ್ ದೀಪ ಅಳವಡಿಕೆ:2020-21ನೇ ಕಾಲೊನಿ ಅಭಿವೃದ್ಧಿ ಯೋಜನೆಯಡಿ ತಲಾ ₹15 ಲಕ್ಷ ವೆಚ್ಚದಲ್ಲಿ ಹಾವೇರಿ ಹಾಗೂ ಸವಣೂರ ವಿಧಾನಸಭಾ ಕ್ಷೇತ್ರದ ಆಯ್ದ ಗ್ರಾಮಗಳ ಪರಿಶಿಷ್ಟ ಕಾಲೊನಿಗಳಿಗೆ ಹೈಮಾಸ್ಟ್‌ ಬೀದಿ ದೀಪ ಅಳವಡಿಕೆ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

₹51 ಕೋಟಿ ವೆಚ್ಚ:ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಹಾಗೂ ಬುಡಕಟ್ಟು ಉಪಯೋಜನೆಯಡಿ ವಿವಿಧ 37 ಇಲಾಖೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ₹103.12 ಕೋಟಿ ನಿಗದಿಪಡಿಸಲಾಗಿದೆ. ಈ ಪೈಕಿ ₹86.35 ಕೋಟಿ ಅನುದಾನ ಬಿಡುಗಡೆಯಾಗಿದೆ. ಆಗಸ್ಟ್ ತಿಂಗಳಾಂತ್ಯದವರೆಗೆ ₹51.12 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಅವರು ಸಭೆಗೆ ಮಾಹಿತಿ ನೀಡಿದರು.

₹88 ಕೋಟಿ ವೆಚ್ಚದ ಕ್ರಿಯಾಯೋಜನೆ:ಜಿಲ್ಲೆಯ ಶೇಕಡಾ 50ಕ್ಕೂ ಹೆಚ್ಚು ಪ್ರಮಾಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ವಾಸಿಸುವ 82 ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ವಿಶೇಷ ಘಟಕ ಹಾಗೂ ಬುಡಕಟ್ಟು ಉಪಯೋಜನೆಯಡಿ ಜಿಲ್ಲಾ ಪಂಚಾಯಿತಿಯಿಂದ ತಯಾರಿಸಲಾದ ₹88.76 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್‌ ತಿಳಿಸಿದರು. ಸದರಿ ಕ್ರಿಯಾ ಯೋಜನೆಯನ್ನು ಸಭೆಯಲ್ಲಿ ಪರಿಶೀಲಿಸಿ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT