ಗುರುವಾರ , ಜೂನ್ 24, 2021
28 °C
ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಎಚ್ಚರಿಕೆ

ಎಸ್‌ಸಿ, ಎಸ್‌ಟಿ ಅಭಿವೃದ್ಧಿ ಯೋಜನೆ ಜಾರಿ ನಿರ್ಲಕ್ಷಿಸಿದರೆ ಕ್ರಮ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಗಳನ್ನು (ಎಸ್.ಇ.ಪಿ./ಎಸ್.ಟಿ.ಪಿ) ಮೊದಲ ಆದ್ಯತೆಯಲ್ಲಿ ಅನುಷ್ಠಾನಗೊಳಿಸಿ ಎಂದು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013ರ ಅನ್ವಯ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳು ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳು ತಕ್ಷಣವೇ ಅನುದಾನದ ಮಾಹಿತಿಯನ್ನು ಖಚಿತಪಡಿಸಿಕೊಂಡು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ಮುಂದಾಗಬೇಕು. ಹಂಚಿಕೆಯಾದ ಅನುದಾನವನ್ನು ವರ್ಷಾಂತ್ಯದವರೆಗೆ ಕಾಯದೆ ಆರ್ಥಿಕ ವರ್ಷದ ಮೊದಲ ಅವಧಿಯಲ್ಲೇ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ವಿಷಯವನ್ನು ಹಗುರವಾಗಿ ಪರಿಗಣಿಸದಿರಿ. ಇದರಿಂದ ನಿಮಗೆ ತೊಂದರೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಈ ಜನರ ಕಲ್ಯಾಣಕ್ಕಾಗಿ ಕ್ರಿಯಾಯೋಜನೆಯನ್ನು ತಮ್ಮ ಹಂತದಲ್ಲೇ ರೂಪಿಸಿ ಅನುಮೋದನೆಯೊಂದಿಗೆ ಅನುಷ್ಠಾನಗೊಳಿಸಬೇಕು. ಈ ಕುರಿತಂತೆ ತ್ವರಿತ ಕ್ರಮಕ್ಕೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸಿಸುವ 38 ಗ್ರಾಮಗಳನ್ನು ‘ಪ್ರಧಾನಮಂತ್ರಿ ಆದರ್ಶ ಗ್ರಾಮ’ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿ 37 ವಿವಿಧ ಇಲಾಖೆಗಳ ಎಸ್.ಇ.ಪಿ./ ಟಿ.ಎಸ್.ಪಿ. ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಬೇಕು. ಮೂಲಸೌಕರ್ಯಗಳು, ಫಲಾನುಭವಿ ಆಧಾರಿತ ಕಾರ್ಯಕ್ರಮಗಳು, ಸಾಕ್ಷರತಾ ಕಾರ್ಯಕ್ರಮ, ಜಾಗೃತಿ ಕಾರ್ಯಕ್ರಮಗಳ ಕುರಿತಂತೆ ಈ ಗ್ರಾಮಗಳಲ್ಲಿ ಹೆಚ್ಚಿನ ಆದ್ಯತೆ ನೀಡಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉದ್ಯೋಗ ಖಾತ್ರಿ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಪೈಕಿ ಒಂದು ನೂರು ದಿನ ಕೆಲಸ ಪೂರೈಸಿರುವವರ ವಿವರ, ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಪೈಕಿ ಎಷ್ಟು ಪ್ರಮಾಣದಲ್ಲಿ ಉದ್ಯೋಗಖಾತ್ರಿ ಕಾರ್ಡ್ ಲಭ್ಯವಾಗಿದೆ, ಎಷ್ಟು ಜನರಿಗೆ ಕೆಲಸ ದೊರೆಕಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಕುರಿತಂತೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ಸಭೆಗೆ ಮಾಹಿತಿ ನೀಡಿದರು.

ಅನುಮೋದನೆ: ಶಿಗ್ಗಾವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ₹25 ಲಕ್ಷ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ.ಪ್ರದೀಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ವಿರೇಂದ್ರ ಕುಂದಗೋಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ವೈ. ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ರೇಷ್ಮೆ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.