ಗುರುವಾರ , ಆಗಸ್ಟ್ 5, 2021
22 °C
ಆಶಾ ಕಾರ್ಯಕರ್ತೆಯರಿಗೆ ಸ್ತ್ರೀಶಕ್ತಿ ಸದಸ್ಯರ ಮಾದರಿಯಲ್ಲಿ ಶೂನ್ಯ ಬಡ್ಡಿ ಸಾಲ: ಸಹಕಾರ ಸಚಿವ

ಜಿಲ್ಲೆಯಲ್ಲಿ ಮೆಗಾಡೇರಿ ಸ್ಥಾಪನೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮೆಗಾಡೇರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಲು ಒಕ್ಕೂಟ ಕುರಿತಂತೆ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಿಸಿ ಅವರು ಮಾತನಾಡಿದರು.

ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಪ್ರತ್ಯೇಕಿಸಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪಿಸುವ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. ನಬಾರ್ಡ್‌ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಹಣಕಾಸು ವ್ಯವಸ್ಥೆ, ಜಮೀನಿನ ಲಭ್ಯತೆ ಸೇರಿದಂತೆ ಮೂರ್ನಾಲ್ಕು ಸಲಹೆಗಳನ್ನು ಕೇಳಿದ್ದಾರೆ. ಇದೇ ಜುಲೈ 2ರಂದು ಮತ್ತೊಂದು ಸಭೆಯನ್ನು ನಡೆಸಲಾಗುವುದು. ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಂಡು ಸಚಿವ ಸಂಪುಟದ ಸಭೆಯ ಮುಂದೆ ತಂದು ಬ್ಯಾಂಕ್ ಸ್ಥಾಪನೆ ಕುರಿತಂತೆ ಅಂತಿಮ ನಿರ್ಣಯ ತೆಗೆದು ಕೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಬಡ್ಡಿ ಸಾಲ:

ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾಗಿದೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರ ಸೇವೆಯನ್ನು ಮನ್ನಿಸಿ ಸಹಕಾರಿ ಇಲಾಖೆಯಿಂದ ರಾಜ್ಯದ ಎಲ್ಲ 41,500 ಆಶಾ ಕಾರ್ಯಕರ್ತೆಯರಿಗೆ ತಲಾ ₹3 ಸಾವಿರದಂತೆ ₹12 ಕೋಟಿ ಪ್ರೋತ್ಸಾಧನ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ 18 ಜಿಲ್ಲೆಯ 14 ಸಾವಿರ ಆಶಾ ಕಾರ್ಯಕರ್ತೆಯರಿಗೆ ₹4 ಕೋಟಿಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಬಲ ನೀಡುವ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಮಾದರಿಯಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಸ್ತ್ರೀ ಶಕ್ತಿ ಗುಂಪುಗಳ ರೀತಿಯಲ್ಲಿ ಆಶಾ ಕಾರ್ಯಕರ್ತೆಯರು ಸ್ವಯ ಸಹಾಯ ಗುಂಪುಗಳನ್ನು ರಚಿಸಿಕೊಂಡರೆ ಅವರಿಗೆ ಆರ್ಥಿಕ ನೆರವು ನೀಡಿ ಶಕ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಗೃಹ ಸಚಿವರಾಗಿ ಬಸವರಾಜ ಬೊಮ್ಮಾಯಿ ಅವರ ಕಾರ್ಯನಿರ್ವಹಣೆ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಸಹಕಾರ ಸಚಿವರು ಕೋವಿಡ್ ನಿಯಂತ್ರಣದಲ್ಲಿ ಗೃಹ ಇಲಾಖೆಯು ಸಮರ್ಥವಾಗಿ ಕಾರ್ಯ ನಿಭಾಯಿಸಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನೂರು ದಿನದಲ್ಲಿ 30 ಜಿಲ್ಲೆಗಳ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳಿಗೆ ಸಮರ್ಥವಾಗಿ ಸ್ಪಂಧಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ನೀಡಿ ಅಭಿನಂದಿಸಲಾಯಿತು.  ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದರು. ಅಧ್ಯಕ್ಷತೆಯನ್ನು ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ ವಹಿಸಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ. ಅಧ್ಯಕ್ಷ ಬಸವನಗೌಡ ದೇಸಾಯಿ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಗುತ್ತೂರ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು