ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರ ಗದ್ದಲ; ಬೊಮ್ಮಾಯಿ ಸಭೆ ಮೊಟಕು

Published 15 ಮಾರ್ಚ್ 2024, 15:46 IST
Last Updated 15 ಮಾರ್ಚ್ 2024, 15:46 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಕಾರ್ಯಕರ್ತರು ಭಾರಿ ಗದ್ದಲ ನಡೆಸಿದ ಪರಿಣಾಮ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಬಸವರಾಜ ಬೊಮ್ಮಾಯಿ ಅವರು ಸಭೆ ಮೊಟಕುಗೊಳಿಸಿ ಹೊರನಡೆದ ಪ್ರಸಂಗ ಶುಕ್ರವಾರ ನಡೆಯಿತು.

ಟಿಕೆಟ್‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಬಸವರಾಜ ಬೊಮ್ಮಾಯಿ ಅವರು ಹಾವೇರಿ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಬೈಕ್‌ ರ್‍ಯಾಲಿ ಮೂಲಕ ಆಗಮಿಸುತ್ತಿದ್ದಂತೆ ಸೇರಿದ್ದ ನೂರಾರು ಕಾರ್ಯಕರ್ತರು ಗದ್ದಲ ಶುರು ಮಾಡಿದರು.

ಬೊಮ್ಮಾಯಿ ಅವರೊಂದಿಗೆ ಬರುತ್ತಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ವಿರುದ್ಧ ಆಕ್ರೋಶ ಹೊರಹಾಕಿದರು. ಹಾವೇರಿ ಗ್ರಾಮೀಣ ಮತ್ತು ನಗರ ಘಟಕದ ಅಧ್ಯಕ್ಷರನ್ನು ಕೂಡಲೇ ಬದಲಾಯಿಸುವಂತೆ ಆಗ್ರಹಿಸಿದರು. ಆಕ್ರೋಶಿತ ಕೆಲ ಕಾರ್ಯಕರ್ತರು ಜಿಲ್ಲಾ ಘಟಕದ ಅಧ್ಯಕ್ಷರನ್ನು ಹಿಡಿದು ಎಳೆದಾಡಿದರು. ಪಕ್ಷದ ಕಾರ್ಯಾಲಯ ಪ್ರವೇಶಿಸುತ್ತಿದ್ದಂತೆ ಗದ್ದಲ ಹೆಚ್ಚಾಯಿತು.

ಪರಿಸ್ಥಿತಿ ಅರ್ಥ ಮಾಡಿಕೊಂಡ ಬಸವರಾಜ ಬೊಮ್ಮಾಯಿ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರೂ ಗದ್ದಲ ತಾರಕಕ್ಕೇರಿತು. ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಆದರೆ, ನಗರದ ವ್ಯಕ್ತಿಯನ್ನು ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ನಾವು ಒಪ್ಪುವುದಿಲ್ಲ. ಎರಡೂ ಘಟಕಗಳ ಅಧ್ಯಕ್ಷರನ್ನು ಬದಲಾಯಿಸಲೇಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾರ್ಯಕರ್ತರ ಭಾವನೆ ಅರ್ಥವಾಗಿದೆ. ಎಲ್ಲರೂ ನನ್ನ ಅಭಿಮಾನಿಗಳಾಗಿದ್ದೀರಿ. ಕೂಡಲೇ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದರ ಅವರೊಂದಿಗೆ ಮಾತನಾಡಿ, ಎರಡೂ ಘಟಕಗಳ ಅಧ್ಯಕ್ಷರ ಬದಲಾವಣೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಆಗಲೂ ಕಾರ್ಯಕರ್ತರ ಗದ್ದಲ ಮುಂದುವರಿದಿದ್ದರಿಂದ ಸಭೆಯನ್ನು ಅಲ್ಲಿಗೇ ಮೊಟಕುಗೊಳಿಸಿ ಬೊಮ್ಮಾಯಿ ಹೊರನಡೆದರು.

ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾವೇರಿ ಗ್ರಾಮೀಣ ಮತ್ತು ನಗರ ಘಟಕದ ಅಧ್ಯಕ್ಷರ ನೇಮಕದ ಬಗ್ಗೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸರಿಪಡಿಸಲಾಗುವುದು
-ಬಸವರಾಜ ಬೊಮ್ಮಾಯಿ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT