ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ

ಅನಧಿಕೃತ ದಾಸ್ತಾನು: ದಾಳಿಗೆ ಸೂಚನೆ
Last Updated 2 ಜೂನ್ 2021, 14:55 IST
ಅಕ್ಷರ ಗಾತ್ರ

ರಟ್ಟೀಹಳ್ಳಿ/ಹಾವೇರಿ: ‘ರಾಜ್ಯದಲ್ಲಿ ಎಲ್ಲಿಯೂ ಗೊಬ್ಬರದ ಕೊರತೆ ಇಲ್ಲ. ಅನಧಿಕೃತ ದಾಸ್ತಾನು ಮಾಡಿದ ಗೋದಾಮುಗಳನ್ನು ಪತ್ತೆ ಮಾಡಿ ದಾಳಿ ಮಾಡಲು ಸೂಚನೆ ನೀಡಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ರಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಧಾರವಾಡ ಜಿಲ್ಲೆಗೆ ಎರಡು ದಿನದಲ್ಲಿ 1600 ಮೆಟ್ರಿಕ್ ಟನ್ ಡಿಎಪಿ ಸರಬರಾಜಾಗುತ್ತಿದೆ. ಸರ್ಕಾರ ಘೋಷಣೆ ಮಾಡಿದ ಪರಿಹಾರ ಧನಕ್ಕೆ ಶೇ 75ರಷ್ಟು ರೈತರು ನೋಂದಾಯಿಸಿಕೊಂಡಿದ್ದಾರೆ. ಉಳಿದ ರೈತರಿಗೆ ತಕ್ಷಣ ವಿತರಿಸಲು ಆದೇಶ ಮಾಡಲಾಗಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಕೋವಿಡ್ ಮೂರನೇ ಅಲೆಗೆ ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಸಿದ್ಧತೆಗಳನ್ನು ಮಾಡಿದೆ. ಈಗಾಗಲೇ ರಾಜ್ಯದಲ್ಲಿ 24 ಸಾವಿರಕ್ಕಿಂತ ಹೆಚ್ಚು ಆಕ್ಸಿಜನ್ ಬೆಡ್‍ಗಳನ್ನು ಸಿದ್ಧಪಡಿಸಲಾಗಿದೆ. ವೆಂಟಿಲೇಟರ್‌ ಸಂಖ್ಯೆಯನ್ನು ಶೇ 100ರಷ್ಟು ಹೆಚ್ಚು ಮಾಡಲಾಗಿದೆ. ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಜುಲೈ, ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ಸದ್ಯಕ್ಕೆ ಕೋವಿಡ್ ವಾರಿಯರ್ ಮತ್ತು ಎರಡನೇ ಡೋಸ್ ಪಡೆಯಲು ಅರ್ಹರಿರುವವರಿಗೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಜಿಲ್ಲೆಗೆ 51 ವೈದ್ಯರ ನೇಮಕ: ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇದ್ದ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಸದ್ಯಕ್ಕೆ 51 ವೈದ್ಯರನ್ನು ನೇಮಕ ಮಾಡಲಾಗಿದೆ. ವೈದ್ಯರ ಅಗತ್ಯತೆಯನ್ನು ಇದು ನೀಗಿಸುತ್ತದೆ ಎಂಬ ಸಮಾಧಾನ ನನಗಿದೆ. ಅವರು ಬೇಗ ಬಂದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡುತ್ತೇನೆ. ಖಾಲಿ ಇರುವ ಇನ್ನಷ್ಟು ವೈದ್ಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಆಸ್ಪತ್ರೆಗಳ ಪರಿಶೀಲನೆ: ರಟ್ಟಿಹಳ್ಳಿ, ಮಾಸೂರು ಮತ್ತು ಹಿರೇಕೆರೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿನ ಪರಿಸ್ಥಿತಿ ಹಾಗೂ ವೈದ್ಯೋಪಚಾರಗಳ ಕುರಿತು ಗೃಹ ಸಚಿವ ಬೊಮ್ಮಾಯಿ ಹಾಗೂ ಕೃಷಿ ಸಚಿವ ಬಿ.ಸಿ ಪಾಟೀಲ ಪರಿಶೀಲನೆ ನಡೆಸಿದರು. ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಲು ನಿರ್ಮಾಣ ಮಾಡಲಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸಚಿವರು ಭೇಟಿ ನೀಡಿದರು. ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು ಆಕ್ಸಿಜನ್ ವೆಂಟಿಲೇಟರ್ ವ್ಯವಸ್ಥೆಯನ್ನು ಉತ್ತಮವಾಗಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT