ಸೋಮವಾರ, ನವೆಂಬರ್ 30, 2020
19 °C

ಮಧ್ಯ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ನಿರ್ಮಾಣ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಹುಬ್ಬಳ್ಳಿ, ಬೆಳಗಾವಿ ಮಾದರಿಯಲ್ಲಿ ಮಧ್ಯ ಕರ್ನಾಟಕದಲ್ಲೂ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ವಿಪುಲ ಉದ್ಯೋಗಾವಕಾಶಗಳು ಸೃಷ್ಟಿಯಾಗಲು ಐಟಿ ಕಂಪನಿಗಳು ಬರಬೇಕು. ಅದಕ್ಕೆ ಅಗತ್ಯವಾದ ಸಾರಿಗೆ ಸಂಪರ್ಕ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಈ ನಾಲ್ಕೂ ಜಿಲ್ಲೆಗಳ ಮಧ್ಯಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಚಿಂತಿಸಲಾಗಿದೆ ಎಂದರು. 

2 ತಿಂಗಳೊಳಗೆ ಸಾಹಿತ್ಯ ಸಮ್ಮೇಳನ:

ಹಾವೇರಿಯಲ್ಲಿ ನಡೆಯಬೇಕಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್‌ ಹಿನ್ನೆಲೆಯಲ್ಲಿ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಕಸಾಪ ಅಧ್ಯಕ್ಷರೊಂದಿಗೆ ಸಭೆ ನಡೆಸಿ, 2 ತಿಂಗಳೊಳಗಾಗಿ ದಿನಾಂಕ ನಿಗದಿಪಡಿಸುತ್ತೇವೆ ಎಂದು ಹೇಳಿದರು. 

ನೀರು ಹರಿಸಿದ್ದು ಬಿಜೆಪಿ:

ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ‘ಮಡ್ಲೂರು ಕೆರೆಗೆ ನೀರು ತಂದಿದ್ದು ನಾನೇ’ ಎಂದು ದಶಕದಿಂದ ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ‌. ಸತ್ಯಾಂಶ ಏನೆಂದರೆ, 2008ರಲ್ಲಿ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕಳ್ಳಂಬೆಳ್ಳ ಕೆರೆಯಿಂದ ಮಡ್ಲೂರು ಕೆರೆಗೆ 0.9 ಟಿಎಂಸಿ ಅಡಿ ನೀರನ್ನು ಹರಿಸಲು ಆದೇಶ ಮಾಡಿದ್ದೆ. ಇದು ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ ಎಂದು ಸ್ಪಷ್ಟನೆ ನೀಡಿದರು. 

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ. ಮುಂದಿನ ಮೂರು ವರ್ಷ ಮಾತ್ರವಲ್ಲ, ಮುಂದಿನ ವಿಧಾನಸಭೆ ಚುನಾವಣೆಯನ್ನೂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು