ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ: ಎಐಟಿಯುಸಿ ಬೃಹತ್‌ ಪ್ರತಿಭಟನೆ ಫೆ.1ಕ್ಕೆ

ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಕೈಬಿಡಲಿ: ವಿಜಯಭಾಸ್ಕರ್‌
Published 21 ಜನವರಿ 2024, 6:29 IST
Last Updated 21 ಜನವರಿ 2024, 6:29 IST
ಅಕ್ಷರ ಗಾತ್ರ

ಹಾವೇರಿ: ಕಾರ್ಮಿಕರ ಕನಿಷ್ಠ ವೇತನ, ಗೌರವಧನ ಹೆಚ್ಚಳಕ್ಕಾಗಿ ಒತ್ತಾಯಿಸಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಲ್ ಇಂಡಿಯಾ ಟ್ರೇಟ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನೇತೃತ್ವದಲ್ಲಿ ಫೆ.1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ. ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳ ಪರಿಣಾಮ ಇಂದು ದೇಶದ ದುಡಿಯುವ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಸಾರ್ವಜನಿಕ ವಲಯದಲ್ಲಿರುವ ಕಂಪನಿ, ಉದ್ಯಮಗಳನ್ನು ಖಾಸಗಿ ವಲಯಕ್ಕೆ ಮಾರಾಟ ಮಾಡಲಾಗುತ್ತಿದೆ. ದೇಶದ ಕಾರ್ಮಿಕರು ನೆಮ್ಮದಿಯ ಬದುಕು ಸಾಗಿಸಲು ಅಗತ್ಯವಾದ ಕನಿಷ್ಠ ವೇತನ, ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ ನೀಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೋಷಣೆ ಮಾಡುತ್ತಿವೆ ಎಂದು ದೂರಿದರು.

6ನೇ ಗ್ಯಾರಂಟಿ ಜಾರಿಗೊಳಿಸಿ:

ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಭರವಸೆಗಳಲ್ಲಿ ಕೇವಲ ಐದು ಗ್ಯಾರಂಟಿಗಳ ಜಾರಿಗೆ ಮಾತ್ರ ಆಸಕ್ತಿ ತೋರುತ್ತಿದೆ. ಸ್ಕೀಂ ವರ್ಕರ್ಸ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿ, ನಿವೃತ್ತಿ ನಂತರ ಇಡುಗಂಟು ನೀಡುವ ಆರನೇ ಗ್ಯಾರಂಟಿ ಜಾರಿಗೊಳಿಸಲು ನಿರ್ಲಕ್ಷ್ಯ ತೋರುತ್ತಿದೆ. ಇಂದಿನ ಬೆಲೆ ಏರಿಕೆಗೆ ಅನುಗುಣವಾಗಿ ಕಾರ್ಮಿಕರು ಬದುಕಲು ವೈಜ್ಞಾನಿಕವಾಗಿ ನೀಡಬೇಕಾದ ಕನಿಷ್ಠ ವೇತನ ಮಾಸಿಕ ₹ 31,500ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಹಣದ ದುರುಪಯೋಗ:

ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿರುವ ಹಣದ ದುರುಪಯೋಗ ತಡೆದು ನೈಜ ಕಾರ್ಮಿಕರ ಕುಟುಂಬಗಳಿಗೆ ಸೌಲಭ್ಯ ಒದಗಿಸಬೇಕು. ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಬೀಡಿ ಕಾರ್ಮಿಕರಿಗೆ ನ್ಯಾಯಯುತ ವೇತನ, ತುಟ್ಟಿಭತ್ಯೆ ಹಾಗೂ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಗಣಿಗಳಲ್ಲಿ ಕೆಲಸ ಮಾಡುವ ಹೆಚ್ಚಿನ ಕಾರ್ಮಿಕರು ಹೊರಗುತ್ತಿಗೆ ಪದ್ಧತಿಯಲ್ಲಿ ದುಡಿಯುತ್ತಿದ್ದು, ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೇಲೆ ಘಟಕ ಹಾಗೂ ವಿಭಾಗ ಮಟ್ಟದಲ್ಲಿ ಹಿಂಸೆ, ಕಿರುಕುಳಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೂಡಲೇ ರಾಜ್ಯ ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಳಿಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಯಮ್ಮನವರ, ಪ್ರಮುಖರಾದ ಅಹ್ಮಜದ್, ಜಯಮ್ಮ, ವಿನಾಯಕ ಕುರುಬರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT