ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ| ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಜಿಲ್ಲಾಧಿಕಾರಿಗೆ ಮನವಿ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Last Updated 8 ಜನವರಿ 2020, 13:00 IST
ಅಕ್ಷರ ಗಾತ್ರ

ಹಾವೇರಿ: ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ನಾಶ ಮಾಡಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಎಐಟಿಯುಸಿ, ಸಿಐಟಿಯು, ಡಿವೈಎಫ್‌ಐ, ಎಸ್‌ಎಫ್‌ಐ ಹಾಗೂ ಹಾವೇರಿ ಜಿಲ್ಲಾ ವಿದ್ಯುತ್‌ ವಿತರಣಾ ಹಾಗೂ ಹೊರಗುತ್ತಿಗೆ ಕಾರ್ಮಿಕರ ಸಂಘಗಳು ಸೇರಿದಂತೆ ಹಲವಾರು ಸಂಘಟನೆಗಳ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಜಮಾಯಿಸಿ, ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಸಿಯೂಟ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರು ಎಐಟಿಯುಸಿ ಮುಖಂಡರ ನೇತೃತ್ವದಲ್ಲಿ ಹುಕ್ಕೇರಿ ಮಠದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಪಿ.ಬಿ. ರಸ್ತೆ ಮೂಲಕ ಹೊಸಮನಿ ಸಿದ್ದಪ್ಪ ವೃತ್ತ ತಲುಪಿದರು. ಎಸ್‌ಎಫ್‌ಐ ಕಾರ್ಯಕರ್ತರು ವಿದ್ಯಾರ್ಥಿಗಳೊಂದಿಗೆ ಹೊಸಮಠದ ವೃತ್ತದ ಬಳಿ ‍ಪ‍್ರತಿಭಟನೆ ನಡೆಸಿದರು.

ಆರ್ಥಿಕ ಹಿಂಜರಿತ, ಕುಸಿಯುತ್ತಿರುವ ಜಿಡಿಪಿ, ಹೆಚ್ಚುತ್ತಿರುವ ನಿರುದ್ಯೋಗ, ಆದಾಯಗಳಲ್ಲಿ ಇಳಿಮುಖ, ಮತಿಹೀನ ಖಾಸಗೀಕರಣ, ರಾಷ್ಟ್ರೀಯ ಸಂಪತ್ತುಗಳ ವಿದೇಶೀಕರಣ, ಕೈಗಾರಿಕೆಗಳ ನಾಶ ಸೇರಿದಂತೆ ಹಲವಾರು ಸಮಸ್ಯೆಗಳಿಂದ ದೇಶದ ಭವಿಷ್ಯ ಆತಂಕಕಾರಿ ಹಂತ ತಲುಪಿದೆ. 1926ರ ಟ್ರೇಡ್‌ ಯೂನಿಯನ್‌ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಕಾರ್ಮಿಕ ಸಂಘಟನೆಗಳ ವ್ಯಾಖ್ಯಾನ ಮತ್ತು ಮಾನ್ಯತೆ ಪ್ರಕ್ರಿಯೆಯನ್ನು ಬದಲಾಯಿಸಲು ಮತ್ತು ಕಾರ್ಮಿಕ ಸಂಘಟನೆಗಳ ಆಂತರಿಕ ವಿಚಾರಗಳಲ್ಲಿ ಮಧ್ಯ ಪ್ರವೇಶಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ಆರೋಪಿಸಿದರು.

ಬೇಡಿಕೆಗಳು:ರಾಷ್ಟ್ರೀಯ ಸಮಾನ ಕನಿಷ್ಠ ವೇತನ ₹21,000 ನಿಗದಿಗೊಳಿಸಬೇಕು. ಕಾರ್ಪೊರೇಟ್‌ ಬಂಡವಾಳ ಪರವಾದ ಮತ್ತು ಕಾರ್ಮಿಕ ವಿರೋಧಿಯಾದ ಕಾರ್ಮಿಕ ಕಾನೂನುಗಳ ಸಂಹಿತೀಕರಣ ಕೈಬಿಡಬೇಕು. ಎಲ್ಲ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯಗಳ ಸ್ಥಾಪನೆ ಆಗಬೇಕು. ಎಲ್ಲರಿಗೂ ಸರ್ಕಾರದಿಂದಲೇ ₹10,000 ಕನಿಷ್ಠ ಖಾತ್ರಿ ಪಿಂಚಣಿ ಜಾರಿ ಮಾಡಬೇಕು. ಉದ್ಯೋಗ ಸೃಷ್ಟಿಗೆ ಕ್ರಮಕೈಗೊಳ್ಳಬೇಕು. ಹಮಾಲಿ, ಬೀದಿಬದಿ, ಕಟ್ಟಡ, ಮೆಕ್ಯಾನಿಕ್‌, ಮನೆಕೆಲಸದವರು ಸೇರಿದಂತೆ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನ ಮೀಸಲಿಡಬೇಕು. ಶಾಸನಬದ್ಧ ಭವಿಷ್ಯ ನಿಧಿ ಮತ್ತು ಪಿಂಚಣಿ ಜಾರಿ ಮಾಡಬೇಕು. ಬಜೆಟ್‌ ಹೆಚ್ಚಳದೊಂದಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಬೇಕು. ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಡಾ.ಸ್ವಾಮಿನಾಥನ್‌ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಖಾತ್ರಿಯಾದ ಬೆಂಬಲ ಬೆಲೆ ನಿಗದಿ ಮಾಡಬೇಕು. ರೈತರ ಮತ್ತು ಕೂಲಿಕಾರರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಗುತ್ತಿಗೆ ಪದ್ಧತಿ ರದ್ದತಿಯಾಗಬೇಕು. ರಕ್ಷಣೆ, ರೈಲ್ವೆ, ಬ್ಯಾಂಕ್‌, ವಿಮೆ ಮುಂತಾದ ಕ್ಷೇತ್ರಗಳಲ್ಲಿ ಖಾಸಗೀಕರಣವನ್ನು ಕೈಬಿಡಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಬೇಕೆಂಬ ಐಎಲ್‌ಸಿ ತೀರ್ಮಾನಗಳ ಜಾರಿಯಾಗಬೇಕು. ರಸ್ತೆ ಸುರಕ್ಷತಾ ಕಾಯ್ದೆ–2019 ವಾಪಸ್‌ ಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೀಶ್ವರ್‌ ಅವರು ಮನವಿ ಸ್ವೀಕರಿಸಿದರು.ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಬಸವರಾಜ ಭೋವಿ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT