ಭಾನುವಾರ, ಜೂನ್ 26, 2022
21 °C
ಕೋವಿಡ್ ಮೂರನೇ ಅಲೆಯಿಂದ ವ್ಯತಿರಿಕ್ತ ಪರಿಣಾಮ: ಸಚಿವ ಬೊಮ್ಮಾಯಿ ಹೇಳಿಕೆ

ಮಕ್ಕಳ ಸುರಕ್ಷತೆಗೆ ‘ಆರೋಗ್ಯ ಶಿಬಿರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕೋವಿಡ್ ಮೂರನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಜೂನ್ 25ರಿಂದ ಮೂರು ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳವಾರು ‘ಆರೋಗ್ಯ ಶಿಬಿರ’ ಹಮ್ಮಿಕೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆಯು ಜೂನ್ ತಿಂಗಳಲ್ಲಿ ಕಡಿಮೆಯಾಗುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೂರನೇ ಅಲೆಯು ಆರಂಭವಾಗುವ ಮುನ್ನ ಮಕ್ಕಳ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಕೈಗೊಂಡು ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ, ರೋಗನಿರೋಧಕ ಶಕ್ತಿಯನ್ನು ಮಕ್ಕಳಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ವೆಂಟಿಲೇಟರ್ ಹೆಚ್ಚಳ:

ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ತಿಂಗಳೊಳಗಾಗಿ 50 ವೆಂಟಿಲೇಟರ್ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಎಂಟು ವೆಂಟಿಲೇಟರ್‌ಗಳನ್ನು ಜಿಲ್ಲೆಗೆ ಕಳುಹಿಸಲು ಮನವಿ ಮಾಡಿಕೊಳ್ಳಲಾಗಿದೆ. ಸರ್ಕಾರ ಮತ್ತು ದಾನಿಗಳ ನೆರವಿನಿಂದ 50 ವೆಂಟಿಲೇಟರ್‌ಗಳ ಸೌಕರ್ಯವನ್ನು ಕಲ್ಪಿಸಲಾಗುವುದು ಎಂದರು.

ಜಿಲ್ಲಾ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್‌ಗಳ ವ್ಯವಸ್ಥೆ ಇದ್ದು, ಧರ್ಮಸ್ಥಳದಿಂದ ಮೂರು ವೆಂಟಿಲೇಟರ್‌ಗಳನ್ನು ದಾನ ಮಾಡಿದ್ದಾರೆ. ಸರ್ಕಾರದಿಂದ ಎಂಟು ವೆಂಟಿಲೇಟರ್‌ಗಳು ಬರಲಿವೆ. ವೆಂಟಿಲೇಟರ್ ನಿರ್ವಹಣೆಗೆ ಅಗತ್ಯವಾದ ಹೆಚ್ಚುವರಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿ ನೇಮಕಾತಿ ಹಾಗೂ ಅಗತ್ಯ ತರಬೇತಿ ವ್ಯವಸ್ಥೆ ಸಹ ಮಾಡಲಾಗುವುದು ಎಂದು ತಿಳಿಸಿದರು.

ಧರ್ಮಸ್ಥಳ ಟ್ರಸ್ಟ್ ವತಿಯಿಂದ ವೆಂಟಿಲೇಟರ್‌ ಹಸ್ತಾಂತರ ಮಾಡುವ ಸಂದರ್ಭ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಮಾಜಿ ಶಾಸಕ ಶಿವರಾಜ ಸಜ್ಜನರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಹಾವೇರಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ತಾಲ್ಲೂಕು ಯೋಜನಾಧಿಕಾರಿ ನಾರಾಯಣ ಗೊಂಡ, ರವಿ ಹಿತ್ತಲಮನಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು