ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸಿ’

Last Updated 16 ಮಾರ್ಚ್ 2023, 5:24 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ, ಮನೆ ರಹಿತರಿಗೆ ನಿವೇಶನ ನೀಡಲು ಹುಲ್ಲುಗಾವಲು ಹೊರತುಪಡಿಸಿ ನಿರುಪಯುಕ್ತ ಸರ್ಕಾರಿ ಜಮೀನನ್ನು ಗುರುತಿಸಿ ನಿವೇಶನ ರಚನೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಿ, ಸಂತೆ ಮೈದಾನದಲ್ಲಿ ಫಲಾನುಭವಿಗಳಿಗೆ ಮನೆ ಹಾಗೂ ನಿವೇಶನಗಳ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪರಿಹಾರಕ್ಕೆ ಬಾಕಿ ಇರುವ ಬಡವರ ಮನೆಗಳನ್ನು ಪುನರ್ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಈ ಮನೆಗಳಿಗೆ ನಿಯಮಾನುಸಾರ ಪರಿಹಾರ ನೀಡಲು ಕ್ರಮವಹಿಸುತ್ತೇನೆ ಎಂದರು.

ಕ್ಷೇತ್ರದಲ್ಲಿ 32 ಕೊಳಚೆ ಪ್ರದೇಶಗಳನ್ನು ಘೋಷಣೆ ಮಾಡಿ ಅವುಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಿಗ್ಗಾವಿ-ಸವಣೂರ-ಬಂಕಾಪುರ ಪಟ್ಟಣದಲ್ಲಿ ವಾಸ ಮಾಡುವ 4042 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಸರ್ಕಾರಿ ಜಮೀನಿನಲ್ಲಿ ವಾಸ ಮಾಡುತ್ತಿರುವ ರಾಜ್ಯದ 10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದೇವೆ ಎಂದರು.

ಕುಗ್ಗುವುದಿಲ್ಲ:

ಸವಾಲು, ಅಡೆತಡೆಗಳನ್ನು ಮೆಟ್ಟಿಲನ್ನಾಗಿ ಮಾಡಿಕೊಂಡು ಮುಂದೆ ಸಾಗಬೇಕು. ನಾನು ಹೊಗಳಿದರೆ ಉಬ್ಬುವುದಿಲ್ಲ, ತೆಗಳಿದರೆ ಕುಗ್ಗುವುದಿಲ್ಲ. ನಿಮ್ಮ ಆಶೀರ್ವಾದ ಇರುವವರೆಗೂ ನಿಮ್ಮ ಸೇವೆ ಮಾಡುವೆ. ನನ್ನ ಜೀವ ಇರುವರೆಗೂ ಕೊನೆಯ ಉಸಿರು ಇರುವ ತನಕ ನಿಮ್ಮ ಸೇವೆ ಮಾಡುವೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಮಾತನಾಡಿ, ಆಡುಮುಟ್ಟದ ಸೊಪ್ಪಿಲ್ಲ, ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರಕ್ಕೆ ಮಾಡದ ಕೆಲಸವಿಲ್ಲ ಎಂಬಂತೆ ಶಿಗ್ಗಾಂವ ಕ್ಷೇತ್ರ ಹಾಗೂ ಹಾವೇರಿ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ನೂರಾರು ಕೋಟಿ ರೂ.ಗಳ ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೇಕಾರ, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT