ಭಾನುವಾರ, ಮೇ 22, 2022
21 °C
ಕೋವಿಡ್‌ ಮಾರ್ಗಸೂಚಿ ಪಾಲಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಹಾವೇರಿ: ಸಾಮಾನ್ಯ ಪ್ರವೇಶ ಪರೀಕ್ಷೆ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ‘ಪಿಜಿಸಿಇಟಿ’ ಮತ್ತು ‘ಡಿಸಿಇಟಿ’ ಸಾಮಾನ್ಯ ಪ್ರವೇಶ ಪರೀಕ್ಷೆ ಜಿಲ್ಲೆಯಲ್ಲಿ ನ.13 ಮತ್ತು 14ರಂದು ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾವೇರಿ ನಗರದ ಜಿ.ಎಚ್. ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಿಲ್ಲದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಾಗಿ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಕ್ರಮವಹಿಸಬೇಕು. ಪೊಲೀಸ್ ಬಂದೋಬಸ್ತ್, ಆರೋಗ್ಯ ಕಾರ್ಯಕರ್ತರ ನೇಮಕ ಸೇರಿದಂತೆ ಎಲ್ಲ ಪೂರ್ವ ಸಿದ್ಧತೆಗಳನ್ನು ನಡೆಸಬೇಕು. 24 ವಿದ್ಯಾರ್ಥಿಗಳಿಗೆ ಒಬ್ಬರಂತೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಬೇಕು ಎಂದು ಸೂಚನೆ ನೀಡಿದರು.

ನಿಷೇಧ: ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ವೈರಲೆಸ್‍ಸೆಟ್, ಲಾಗ್‍ಟೇಬಲ್, ಕ್ಯಾಲ್ಕುಲೇಟರ್‌ ಹಾಗೂ ರಿಸ್ಟ್‌ ವಾಚ್‌ಗಳನ್ನು ವಿದ್ಯಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯೊಳಗೆ ತರದಂತೆ ನಿಷೇಧಿಸಬೇಕು. ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಪದ್ಧತಿ ಮೂಲಕ ನೇಮಕ ಮಾಡಬೇಕು. ಪರೀಕ್ಷಾ ಸಿಬ್ಬಂದಿಗೆ ಗುರುತುಪತ್ರ ನೀಡಬೇಕು ಎಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ದೇಶಿತ ಪ್ರದೇಶವೆಂದು ಘೋಷಿಸಲಾಗುತ್ತಿದ್ದು, ಅದರ ಸುತ್ತಲಿನ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಆದೇಶಿಸಲಾಗುವುದು. ಪರೀಕ್ಷಾ ಮುನ್ನಾ ದಿನ ಹಾಗೂ ಪರೀಕ್ಷಾ ದಿನಗಳಂದು ಪರೀಕ್ಷೆ ನಡೆಯುವ ಎಲ್ಲ ಕೊಠಡಿಗಳನ್ನು ಸೋಂಕು ನಿವಾರಕ ದ್ರಾವಣ ಸಿಂಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಉಮೇಶಪ್ಪ ಅವರು ಪರೀಕ್ಷಾ ಸಿದ್ಧತೆ ಬಗ್ಗೆ ವಿವರಿಸಿ, ಎಂಟೆಕ್‌ ಕೋರ್ಸ್‍ಗೆ 120, ಡಿಪ್ಲೊಮಾ ಕೋರ್ಸ್‍ಗೆ 312, ಎಂ.ಸಿ.ಎ ಕೋರ್ಸ್‍ಗೆ 72 ಹಾಗೂ ಎಂ.ಬಿ.ಎ ಕೋರ್ಸ್‍ಗೆ 240 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. 

ಪರೀಕ್ಷಾ ವೇಳಾಪಟ್ಟಿ
ನ.13ರಂದು ಮಧ್ಯಾಹ್ನ 2.30 ರಿಂದ 4.30ರವರೆಗೆ ಎಂ.ಟೆಕ್‌, ನ.14ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಡಿ.ಸಿ.ಇ.ಟಿ. ಕೋರ್ಸ್‍ಗೆ, ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಎಂ.ಸಿ.ಎ ಕೋರ್ಸ್‍ಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಎಂ.ಬಿ.ಎ ಕೋರ್ಸ್‍ಗೆ ಪರೀಕ್ಷೆ ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.