ಸಂಪೂರ್ಣ ಸಾಲಮನ್ನಾ: ರೈತರಿಂದ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

7

ಸಂಪೂರ್ಣ ಸಾಲಮನ್ನಾ: ರೈತರಿಂದ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

Published:
Updated:
Deccan Herald

ಹಾವೇರಿ:
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೊಟ್ಟ ಮಾತಿನಂತೆ ಆ.14ರೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ, ಸ್ವಾತಂತ್ರ್ಯ ದಿನಾಚರಣೆಯಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಜುಲೈ 21ರಂದು ಕೊಪ್ಪಳ ಜಿಲ್ಲೆಯ ಹಿಟ್ನಾಳ ಕ್ರಾಸ್‌ ಬಳಿ ನಡೆದಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್ ವೇಳೆ ಕೈಗೊಂಡಿದ್ದೆವು. ಅದರನ್ವಯ ಪ್ರತಿಭಟನೆ ನಡೆಸಿದ್ದೇವೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಸಾಲಮನ್ನಾ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ, ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಿವೆ. ನೋಟಿಸ್ ನೀಡಬಾರದು. ರೈತರಿಗೆ ಬೆಳೆ ವಿಮೆ ತುಂಬಲು ದಿನಾಂಕ ನಿಗದಿ ಪಡಿಸಿದಂತೆ, ಪರಿಹಾರ ನೀಡಲೂ ವಿಮಾ ಕಂಪೆನಿಗಳಿಗೆ ದಿನಾಂಕ ನಿಗದಿ ಪಡಿಸಬೇಕು. ಹೊಸದಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಹಾಗೂ ರೈತರಿಗೆ ದಿನಕ್ಕೆ 10 ಗಂಟೆ 3ಫೇಸ್ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸದ್ದರೆ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ– 4ರ ಮೋಟೆಬೆನ್ನೂರ ಹತ್ತಿರ ಬೃಹತ್‌ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಸಂಘಟನೆ ಕಾರ್ಯದರ್ಶಿ ಮಹೇಂದ್ರಪ್ಪ ತಳವಾರ, ಮಲ್ಲನಗೌಡ್ರ ಮಾಳಗಿ, ಮಹಾದೇವಪ್ಪ ಬಣಕಾರ, ಸಿದ್ದಪ್ಪ ಬಣಕಾರ, ಸೋಮಶೇಖರಪ್ಪ ಚಪ್ಪರದಳ್ಳಿ, ನಿಂಗಪ್ಪ ಮಲೆಬೆನ್ನೂರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !