ಭಾನುವಾರ, ಮೇ 22, 2022
24 °C
ತೈಲ ಮತ್ತು ದಿನಸಿ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಜನರ ಜೀವ ಹಿಂಡುತ್ತಿರುವ ಕೇಂದ್ರ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದನ್ನು ಖಂಡಿಸಿ, ನಗರದ ಮೈಲಾರ ಮಹದೇವಪ್ಪ ವೃತ್ತದಿಂದ -ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. 

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ‘ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ.  ಬೆಲೆ ಏರಿಕೆ ಮುಖಾಂತರ ಸಾಮಾನ್ಯ ಜನರ ಜೀವ ಹಿಂಡಲಾಗುತ್ತಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮುನ್ನ ತೈಲ ಬೆಲೆ ಹೆಚ್ಚಳದ ಬಗ್ಗೆ ಕಾಂಗ್ರೆಸ್‌ ಅನ್ನು ಟೀಕಿಸುತ್ತಿದ್ದರು. ಇಂದು ಅವರೇ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದು ಬೆಲೆ ಏರಿಕೆ ಜಾಸ್ತಿ ಮಾಡುತ್ತಾ ಇದ್ದಾರೆ ಎಂದು ಕುಟುಕಿದರು. 

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ‘ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಭಾವನಾತ್ಮಕ ಅಂಶಗಳ ಮೂಲಕ ಜ್ವಲಂತ ಸಮಸ್ಯೆಗಳನ್ನು ಮರೆಸಿ, ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಬೆಲೆ ಏರಿಕೆ ಇಳಿಸದೇ ಇದ್ದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಪ್ರಸನ್ನ ಹಿರೇಮಠ, ‘ಕೇಂದ್ರ ಸರ್ಕಾರ ತಕ್ಷಣವೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಇಳಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮುಂದುವರಿಸಲಾಗುವುದು. ಶೇ 40ರ ಕಮಿಷನ್ ದಂಧೆ ನಿಯಂತ್ರಿಸದೆ ಭ್ರಷ್ಟ ಸರ್ಕಾರವಾಗಿದೆ’ ಎಂದು ಆರೋಪಿಸಿದರು.

ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜು ನೀಲಗುಂದ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ ಶೆಲವಡಿ, ಈರಪ್ಪ ಲಮಾಣಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಂ.ಮೈದೂರ, ಅಬ್ದುಲ್ ಜಮಾದಾರ, ಬಸಯ್ಯ ಹಿರೇಮಠ್, ಅತಾವುಲ್ಲಾ ಖಾಜಿ, ಬಸವರಾಜ್ ಮಾಳಗಿ, ಗಣೇಶ ಭೀಷ್ಟಣ್ಣನವರ, ಬಸವರಾಜ ಬಳ್ಳಾರಿ, ಫಕ್ಕಿರೇಶ ಹುರುಳಿಕೊಪ್ಪಿ, ಯುವ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಶಿವು ಭದ್ರಾವತಿ, ಶಿವು ತಳವಾರ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.