ಶನಿವಾರ, ಮಾರ್ಚ್ 6, 2021
32 °C
ಎಪಿಎಂಸಿ ಮೆಗಾ ಮಾರುಕಟ್ಟೆ ಸ್ಥಾಪಿಸಲು ಕ್ರಮ

ನಗರದಲ್ಲಿ ಎಸ್ಪಿ ಕಚೇರಿ ನಿರ್ಮಾಣ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೊಸ ಕಚೇರಿ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ನಿವೇಶನ ಗುರುತಿಸಲು ಸೂಚನೆ ನೀಡಲಾಗಿದೆ. ನಗರ ವ್ಯಾಪ್ತಿಯೊಳಗೆ ಕಟ್ಟಡ ನಿರ್ಮಾಣ ಮಾಡಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊ‌ಮ್ಮಾಯಿ ಹೇಳಿದರು. 

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೈಗಾರಿಕೆ ಅಭಿವೃದ್ಧಿ ನೀಡುವ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಜವಳಿ ಪಾರ್ಕ್ ಹಾಗೂ ರಾಣೆಬೆನ್ನೂರು ನಗರದಲ್ಲಿ ಎಪಿಎಂಸಿ ಮೆಗಾ ಮಾರುಕಟ್ಟೆ ಈ ವರ್ಷ ಆರಂಭಿಸಲಾಗುವುದು ಎಂದು ತಿಳಿಸಿದರು.

ಟೆಟ್ರಾ ಪ್ಯಾಕಿಂಗ್‌ ಪ್ಲಾಂಟ್‌: ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ. ಕೆ.ಎಂ.ಎಫ್ ಹಾಗೂ ಯೂನಿಯನ್‍ನಿಂದ ಹಣ ಒದಗಿಸಲಾಗಿದೆ. ಲಾಂಗ್‍ಲೈಫ್ ಟೆಟ್ರಾ ಪ್ಯಾಕಿಂಗ್ ಯು.ಎಚ್.ಟಿ. ಪ್ಲಾಂಟ್ ಸ್ಥಾಪನೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಮಂಜೂರಾತಿ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದರು.

ಪ್ರತ್ಯೇಕ ಡಿಸಿಸಿ ಬ್ಯಾಂಕ್‌: ಪ್ರತ್ಯೇಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸ್ಥಾಪನೆ ಕುರಿತಂತೆ ಈಗಾಗಲೇ ಸಹಕಾರಿ ಖಾತೆ ಸಚಿವರೊಂದಿಗೆ ಚರ್ಚಿಸಲಾಗಿದೆ. ಈ ಕುರಿತಂತೆ ಮುಂದಿನ ಅಧಿವೇಶನದ ಸಂದರ್ಭದಲ್ಲಿ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ನಬಾರ್ಡ್ ಹಾಗೂ ಆರ್.ಬಿ.ಐ. ಮಾರ್ಗಸೂಚಿಗಳು ಜಿಲ್ಲೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ಸ್ಥಾಪನೆಗೆ ತೊಂದರೆಯಾಗಿದೆ. ಈ ಕುರಿತು ಕಾನೂನು ಏನು ಹೇಳುತ್ತದೆ ನೋಡಿಕೊಂಡು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಳ ಬದಲಾವಣೆ ಅಥವಾ ಪ್ರತ್ಯೇಕ ರಸ್ತೆ ನಿರ್ಮಾಣ ಕುರಿತಂತೆ ಆರೋಗ್ಯ ಸಚಿವರಿಗೆ ಮಾಹಿತಿ ನೀಡಲಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ಆರೋಗ್ಯ ಸಚಿವರು ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕ್ರಷರ್‌ಗಳ ಪರಿಶೀಲನೆ: ಗಣಿಗಾರಿಕೆ ಹಾಗೂ ಕ್ರಷರ್ ಮಾರ್ಗಸೂಚಿಗಳು ಪ್ರತ್ಯೇಕವಾಗಿದ್ದು, ಮಾರ್ಗಸೂಚಿಗಳ ಅನುಸಾರ ಸ್ಫೋಟಕಗಳನ್ನು ಬಳಸಬೇಕು ಎಂಬ ನಿಯಮವಿದೆ. ತಿಂಗಳಿಗೆ ಎಷ್ಟು ಪ್ರಮಾಣದಲ್ಲಿ ಬಳಸುತ್ತಿದ್ದಾರೆ ಎಂಬ ಬಗ್ಗೆ ಪರಿಶೀಲನೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು