ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಠರೋಗ ಮುಕ್ತ ಜಿಲ್ಲೆಗೆ ಸಹಕರಿಸಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

Last Updated 30 ಜನವರಿ 2021, 16:16 IST
ಅಕ್ಷರ ಗಾತ್ರ

ಹಾವೇರಿ: ‘ಕುಷ್ಠರೋಗವನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಬಹುದು. ಜಿಲ್ಲೆಯನ್ನು ಕುಷ್ಠರೋಗ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಕರೆ ನೀಡಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ (ಕುಷ್ಠರೋಗ ವಿಭಾಗ) ಹಾಗೂ ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಜಾಥಾಕ್ಕೆ ಶನಿವಾರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಕುಷ್ಠರೋಗಕ್ಕೆ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಔಷಧ ವಿತರಿಸಲಾಗುತ್ತದೆ. ಕುಷ್ಠರೋಗ ನಿಷ್ಕಾಳಜಿ ಮಾಡಿದರೆ ಅಂಗವಿಕಲತೆ ಉಂಟಾಗುತ್ತದೆ. ರೋಗಿಯು ಸಾಮಾಜಿಕ ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಆರಂಭದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತಂದು, ಚಿಕಿತ್ಸೆ ನೀಡಿ ಬಾಪೂಜಿಯವರ ನಂಬಿಕೆ ಮತ್ತು ಸದುದ್ದೇಶಗಳನ್ನು ಸಾಕಾರಗೊಳಿಸೋಣ ಎಂದು ಹೇಳಿದರು.

ಕುಷ್ಠರೋಗ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಕುಷ್ಠರೋಗದ ಅರಿವು ಮೂಡಿಸುವ ಪ್ರದರ್ಶನ ಹಾಗೂ ಕುಷ್ಠರೋಗದಿಂದ ಗುಣಮುಖರಾದ ರೋಗಿಗಳ ಅಂಗವಿಕಲತೆ ತಡೆಗಟ್ಟುವಿಕೆ ಮತ್ತು ವೈದ್ಯಕೀಯ ಪುನರ್ವಸತಿ ಶಿಬಿರ ಉದ್ಘಾಟಿಸಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಚನಬಸಯ್ಯ ವಿರಕ್ತಮಠ ಮಾತನಾಡಿ, ‘ಕುಷ್ಠರೋಗ ಶಾಪವಲ್ಲ, ಎಂ.ಡಿ.ಟಿ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಜಿಲ್ಲೆಯಲ್ಲಿ 2020-2021 ರಲ್ಲಿ 33 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಷ್ಠರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸುರೇಶ ಪೂಜಾರ, ಡಾ.ರಾಥೋಡ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT