ಬುಧವಾರ, ಏಪ್ರಿಲ್ 14, 2021
28 °C
ಕೋವಿಡ್‌ ಲಸಿಕೆ ಹಾಕುವ ಆಸ್ಪತ್ರೆಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ –ಡಿ.ಸಿ

ಕೋವಿಡ್‌ ಲಸಿಕೆ: ಪೊಲೀಸರಿಗೆ ಮೊದಲ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಸುಲಭವಾಗಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ದೊರೆಯಲು ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ಆರೋಗ್ಯ ಸಿಬ್ಬಂದಿ, ಪೊಲೀಸ್, ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕೋವಿಡ್ ವಾರಿಯರ್‌ಗಳಿಗೆ ಲಸಿಕೆ ನೀಡುವ ಎರಡು ಸುತ್ತಿನ ಕಾರ್ಯಕ್ರಮಗಳನ್ನು ಕೈಗೊಂಡು ಪ್ರಸ್ತುತ ಸಾರ್ವಜನಿಕರಿಗೆ ಲಸಿಕೆ ನೀಡಲು ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.

ಶೇ 70ರಷ್ಟು ಮಂದಿಗೆ ಲಸಿಕೆ:

ಈವರೆಗೆ ಪೊಲೀಸ್ ಸಿಬ್ಬಂದಿಗಳು ಶೇ 70 ರಷ್ಟು ಲಸಿಕೆ ಹಾಕಿಸಿಕೊಂಡಿದ್ದಾರೆ. ಅತಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ಪಡೆದ ಪೊಲೀಸ್ ಇಲಾಖೆಗೆ ಅಭಿನಂದಿಸುತ್ತೇನೆ. ಕಂದಾಯ ಮತ್ತು ಪಂಚಾಯತ್ ರಾಜ್ ಸಿಬ್ಬಂದಿ ಕೇವಲ ಶೇ 22ರಷ್ಟು ಲಸಿಕೆ ಪಡೆದಿದ್ದಾರೆ. ಭಾರತದಲ್ಲಿ ನೀಡುತ್ತಿರುವ ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಲಸಿಕೆ ಪಡೆಯಲು ಯಾರೂ ಹಿಂಜರಿಯುವ ಅಗತ್ಯವಿಲ್ಲ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಎರಡು ಖಾಸಗಿ ಹಾಗೂ ಏಳು ಸರ್ಕಾರಿ ಆಸ್ಪತ್ರೆಗಳಲ್ಲಿ ಮೂರನೇ ಸುತ್ತಿನ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ₹250 ಪ್ರತಿ ಡೋಸ್‍ಗೆ ಶುಲ್ಕ ಪಾವತಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಲಸಿಕೆ ನೀಡುವ ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದರು.

ಸಾರ್ವಜನಿಕರಿಗೆ ಅವಕಾಶ:

ಮೂರನೇ ಸುತ್ತಿನಲ್ಲಿ ಕೋವಿಡ್ ಲಸಿಕೆ ಪಡೆಯಲು ಗಂಭೀರ ಸ್ವರೂಪದ ಅನ್ಯ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಹಾವೇರಿ ಜಿಲ್ಲಾ ಆಸ್ಪತ್ರೆ, ಬ್ಯಾಡಗಿ, ಹಾನಗಲ್, ಹಿರೇಕೆರೂರು, ರಾಣೇಬೆನ್ನೂರು, ಸವಣೂರು ಹಾಗೂ ಶಿಗ್ಗಾವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದರು. 

ಹಾವೇರಿ ನಗರದ ವೀರಾಪುರ ಮಲ್ಟಿಸ್ಪೆಷಾಲಿಟಿ ಹಾಸ್ಟಿಟಲ್ ಹಾಗೂ ರಾಣೆಬೆನ್ನೂರ ನಗರದ ಓಂ ಹಾಸ್ಪಿಟಲ್‍ನಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು