ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸಾವು ಹೆಚ್ದಳ, ಲ್ಯಾಬ್‌ ವರದಿ ವಿಳಂಬ: ಸಚಿವ ಬೊಮ್ಮಾಯಿ ಅಸಮಾಧಾನ

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ
Last Updated 31 ಮೇ 2021, 16:23 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯಲ್ಲಿ ನಿಗದಿತ ಗುರಿಯಂತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಿಲ್ಲ. ನಿಗದಿತ ಗುರಿ ಸಾಧಿಸದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಅಮಾನತುಗೊಳಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಸೋಮವಾರ ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ‘ವಿಡಿಯೊ ಸಂವಾದ’ ನಡೆಸಿದ ಸಚಿವರು, ಜಿಲ್ಲೆಯ ತಾಲ್ಲೂಕುವಾರು ಕೋವಿಡ್ ಸ್ಥಿತಿಗತಿ ಕುರಿತಂತೆ ಮಾಹಿತಿ ಪಡೆದುಕೊಂಡರು.

ಮರಣ ಪ್ರಮಾಣ ಕಡಿಮೆ ಮಾಡುವ ಹಿನ್ನೆಲೆಯಲ್ಲಿ, ಪ್ರತಿದಿನ ಕನಿಷ್ಠ 2 ಸಾವಿರ ಕೋವಿಡ್ ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿತ್ತು. ಆದರೆ ಯಾರೂ ಸೂಚನೆ ಪಾಲಿಸುತ್ತಿಲ್ಲ. ಇದರಿಂದ ಪಾಸಿಟವ್ ಪ್ರಕರಣಗಳು ಹೆಚ್ಚಾಗುತ್ತಿವೆ.ಕಳೆದ ಎರಡು ತಿಂಗಳಿನಿಂದ ಪ್ರಮಾಣ ನಿಯಂತ್ರಿಸಲು ನಿಮಗೆ ಸಾಧ್ಯವಾಗಿಲ್ಲ. ನಿಮಗೆ ಕರ್ತವ್ಯ ಪ್ರಜ್ಞೆ ಹಾಗೂ ಜವಾಬ್ದಾರಿ ಇಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಾಸಿಟಿವ್ ಪ್ರಕರಣ ಪತ್ತೆಯಾದ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ತಕ್ಷಣವೇ ಪರೀಕ್ಷೆಗೆ ಒಳಪಡಿಸಬೇಕು. 36 ತಾಸಿನಗೊಳಗಾಗಿ ಲ್ಯಾಬ್ ವರದಿ ಬರಬೇಕು. ವ್ಯಕ್ತಿಯ ಆರೋಗ್ಯ ಸ್ಥಿತಿಗನುಸಾರ ಕೋವಿಡ್ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗಳಿಗೆ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದರು.

ವೆಂಟಿಲೇಟರ್‌ಗೆ ಅಗತ್ಯವಾದ ಮಾನಿಟರ್‌ ಖರೀದಿಗೆ ತುರ್ತು ಕ್ರಮ ವಹಿಸಬೇಕು. ಸರ್ಕಾರಿ ವೈದ್ಯರ ಕೊರತೆ ಇದ್ದರೆ ಖಾಸಗಿ ಅರಿವಳಿಕೆ ವೈದ್ಯರ ಸೇವೆ ಬಳಕೆಗೆ ಕ್ರಮವಹಿಸಬೇಕು. ಈಗಾಗಲೇ ನಿಯೋಜನೆಗೊಳಿಸಿದ ಸರ್ಕಾರಿ ಅರಿವಳಿಕೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು, ಜಿಲ್ಲೆಯ ಕೋವಿಡ್ ಸ್ಥಿತಿಗತಿಗಳ ಕುರಿತಂತೆ ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು. ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಸಚಿವರಿಗೆ ಕೋವಿಡ್‌ ಸ್ಥಿತಿಗತಿ ಕುರಿತಂತೆ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಸಂತೋಷ್, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಜಯಾನಂದ, ಡಾ.ನಿಲೇಶ್, ಡಾ.ದಯಾನಂದ, ಟಿಎಚ್‌ಒ ಡಾ.ಪ್ರಭಾಕರ ಕುಂದೂರ, ತಹಶೀಲ್ದಾರ್‌ ಗಿರೀಶ ಸ್ವಾದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT