ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಅಭಿವೃದ್ದಿಗೆ ‘ವಿಷನ್‌ ಡಾಕ್ಯುಮೆಂಟ್‌’

ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿ ಕಳಪೆಯಾದರೆ ಕ್ರಮ: ಬೊಮ್ಮಾಯಿ
Last Updated 13 ನವೆಂಬರ್ 2020, 16:28 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬರುವ ಜನವರಿ ತಿಂಗಳಲ್ಲಿ ‘ವಿಷನ್ ಡಾಕ್ಯುಮೆಂಟ್‌’ ತಯಾರಿಸಲಾಗುವುದು. ಈ ಕುರಿತಂತೆ ಈಗಾಗಲೇ ರಾಜ್ಯ ಯೋಜನಾ ಆಯೋಗ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ದೇವಗಿರಿ-ಯಲ್ಲಾಪೂರದಲ್ಲಿ ಶುಕ್ರವಾರ ಆಯೋಜಿಸಿದ್ದ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ, ನೀರಾವರಿ ಕ್ಷೇತ್ರದ ಬೆಳವಣಿಗೆ, ಉದ್ಯೋಗ ಸೃಜನೆಗೆ ಅವಶ್ಯವಾದ ಐಟಿ ಕ್ಷೇತ್ರದ ಉತ್ತೇಜನಕ್ಕೆ ದಿಕ್ಸೂಚಿಯಾಗಬಲ್ಲದ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕಟ್ಟಡ ಕಾಮಗಾರಿಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ಇದರಲ್ಲಿ ಯಾವುದೇ ರಾಜಿ ಅಥವಾ ಬಲವಂತಕ್ಕೆ ಮಣಿಯುವುದಿಲ್ಲ. ಉತ್ತಮ ಗುಣಮಟ್ಟದ ಆರೋಗ್ಯ ಸಂಕೀರ್ಣ ನಿರ್ಮಾಣವಾಗಬೇಕು. ಕಟ್ಟಡ ನಿರ್ಮಾಣದಲ್ಲಿ ಲೋಪವಾದರೆ ಅಂತಹ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಿ.ಎಂ.ಗೆ ವಿಶೇಷ ಪ್ರೀತಿ:

ಹಾವೇರಿ ಜಿಲ್ಲೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶೇಷ ಪ್ರೀತಿ ಇದೆ. ಕಳೆದ ವರ್ಷ ಹಾನಗಲ್, ಬ್ಯಾಡಗಿ, ಹಿರೇಕೆರೂರ ತಾಲ್ಲೂಕುಗಳಿಗೆ ತಲಾ ಎರಡು ಏತ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿದ್ದು, ಈ ಯೋಜನೆಗಳು ಪ್ರಗತಿಯಲ್ಲಿವೆ. ಇನ್ನಾರು ತಿಂಗಳಲ್ಲಿ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಲೋಕಾರ್ಪಣೆಗೊಳಿಸಲಾಗುವುದು. ಸಚಿವ ಸಂಪುಟದಲ್ಲಿ ರಾಣೆಬೆನ್ನೂರು ತಾಲೂಕಿಗೆ ಹೊಸದಾಗಿ ಎರಡು ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ ಎಂದು ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಶೀಘ್ರವೇ ದಿನಾಂಕ ನಿಗದಿಪಡಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

157 ಮೆಡಿಕಲ್‌ ಕಾಲೇಜು ಸ್ಥಾಪನೆ

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ,6 ವರ್ಷಗಳಲ್ಲಿ ಕೇಂದ್ರ ಸರ್ಕಾರ 157 ಸರ್ಕಾರಿ ಮೆಡಿಕಲ್‌ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆ. ಕೆಲವು ಖಾಸಗಿ ಮೆಡಿಕಲ್‌ ಕಾಲೇಜುಗಳಲ್ಲಿ ಹಣ ಉಳ್ಳವರಿಗೆ ಮಾತ್ರ ಸೀಟುಗಳು ಲಭ್ಯವಾಗುತ್ತಿದ್ದವು. ಸರ್ಕಾರಿ ಕಾಲೇಜು ಆರಂಭದಿಂದ 27 ಸಾವಿರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಾಗೂ 17 ಸಾವಿರ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಹಾವೇರಿ ಆರೋಗ್ಯ ನಗರ

‘ಹಾವೇರಿ ಆರೋಗ್ಯ ನಗರ’ ಕಟ್ಟಲು ತೀರ್ಮಾನಿಸಲಾಗಿದೆ.ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣದ ಜೊತೆಗೆ ಒಂದೇ ಸಂಕೀರ್ಣದಲ್ಲಿ ನರ್ಸಿಂಗ್, ಪ್ಯಾರಾ ಮೆಡಿಕಲ್, ಆಯುಷ್ ಸೇರಿದಂತೆ ಸಮಗ್ರ ಆರೋಗ್ಯ ವಿಭಾಗಗಳನ್ನು ತೆರೆಯಲಾಗುವುದು’ ಎಂದು ಸಚಿವ ಡಾ.ಕೆ.ಸುಧಾಕರ ಘೋಷಿಸಿದರು.

ಕಾರ್ಯಕ್ರಮದ ಕೊನೆಗೆ ನೂತನ ವೈದ್ಯಕೀಯ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಕೇಂದ್ರ ಸಚಿವ ಜೋಶಿ ಅಸಮಾಧಾನ

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡದ ಶಂಕುಸ್ಥಾಪನೆ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿಲ್ಲದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿ, ₹150 ಕೋಟಿ ಅನುದಾನ ನೀಡಿದ್ದರೂ, ಪ್ರಧಾನಿಯವರ ಭಾವಚಿತ್ರವನ್ನು ಜಿಲ್ಲಾಡಳಿತ ಬಳಸಿಲ್ಲ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರನ್ನು ಪ್ರಶ್ನಿಸಿದರು. ತಮ್ಮ ಭಾಷಣದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT