ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಪ್‌ಸೆಟ್‌ಗೆ ಮೀಟರ್‌ ಅಳವಡಿಸಬೇಡಿ

ವಿದ್ಯುತ್‌ ಖಾಸಗೀಕರಣ ಹಿಂಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಆ.2ರಂದು
Last Updated 21 ಜುಲೈ 2021, 17:14 IST
ಅಕ್ಷರ ಗಾತ್ರ

ಹಾವೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿ ಮಾಡಿರುವ 3 ಕರಾಳ ಕಾನೂನುಗಳನ್ನು ಹಾಗೂ ವಿದ್ಯುತ್‌ ಖಾಸಗೀಕರಣ ಹಿಂಪಡೆಯಲು ಆಗ್ರಹಿಸಿ ಆಗಸ್ಟ್‌ 2ರಂದು ‘ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ’ ಹಾಕಲಿದ್ದೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ವಿ. ಕೆಂಚಳ್ಳೇರ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಅಂದು ಕಾಗಿನೆಲೆ ಕ್ರಾಸ್‌ನಿಂದ ಪ್ರತಿಭಟನಾ ಜಾಥಾದ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಸಮಸ್ತ ರೈತರು, ಕೃಷಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತ ಮಹಿಳೆಯರು, ವಿವಿಧ ಸಂಘಟನೆಗಳು ಭಾಗವಹಿಸಬೇಕು ಎಂದು ವಿನಂತಿ ಮಾಡಿದರು.

‘ವಿದ್ಯುತ್‌ ಖಾಸಗೀಕರಣದಿಂದ ರೈತರಿಗೆ ದೊಡ್ಡ ವಿಪತ್ತು ಎದುರಾಗುವ ಲಕ್ಷಣಗಳಿವೆ. ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವುದರ ಮೂಲಕ ಪಂಪ್‌ಸೆಟ್‌ ಬಳಕೆದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಿ, ದೊಡ್ಡ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸತತ 8 ತಿಂಗಳುಗಳಿಂದ ದೆಹಲಿ ಗಡಿಯಲ್ಲಿ ಮಳೆ, ಚಳಿ, ಗಾಳಿ ಲೆಕ್ಕಿಸದೆ ಕರಾಳ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಅನೇಕ ರೈತರು ಪ್ರಾಣವನ್ನು ಸಹ ಕಳೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕೃಷಿಗೆ ಮಾರಕವಾದ ಭೂ–ಸುಧಾರಣೆ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಹಾಗೂ ವಿದ್ಯುತ್‌ ಖಾಸಗೀಕರಣ ಮಾಡುವುದರ ಮೂಲಕ ದೇಶದ ರೈತರಿಗೆ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಆಸ್ಪತ್ರೆ ಸ್ಥಾಪಿಸಿ, ವೈದ್ಯರನ್ನು ನೇಮಕ ಮಾಡಬೇಕು, ರಾಷ್ಟ್ರೀಯ ಹೆದ್ದಾರಿ–4ರಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಛತ್ರ, ಮೋಟೆಬೆನ್ನೂರ, ಗುಂಡೇನಹಳ್ಳಿ, ನೆಲೋಗಲ್ಲ ಗ್ರಾಮಗಳಿಗೆ ಸರ್ವಿಸ್‌ ರಸ್ತೆಯನ್ನು ಕೂಡಲೇ ನಿರ್ಮಿಸಬೇಕು. ಬ್ಯಾಂಕುಗಳಲ್ಲಿ ಸಾಲ ಪಡೆದ ರೈತರಿಗೆ ‘ಸಿಬಿಲ್‌’ ನೆಪದಲ್ಲಿ ಸಾಲ ಕೊಡುವುದನ್ನು ನಿಲ್ಲಿಸಿದ್ದು, ಆ ರೈತರಿಗೆ ಕೂಡಲೇ ಸಾಲ ಸಿಗುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಅಡಿವೆಪ್ಪ ಆಲದಕಟ್ಟಿ, ಮರಿಗೌಡ್ರ ಪಾಟೀಲ, ಸುರೇಶ ಚಲವಾದಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT