ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ; 9 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ

ಕೊರೊನಾ ವಾರಿಯರ್ಸ್‌ಗೆ ಮೊದಲ ಆದ್ಯತೆ
Last Updated 16 ಜನವರಿ 2021, 15:10 IST
ಅಕ್ಷರ ಗಾತ್ರ

ಹಾವೇರಿ: ದೇಶದ ಬಹುನಿರೀಕ್ಷಿತ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ದೊರೆಯಿತು. ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ದೀಪ ಬೆಳಗಿಸುವುದರ ಮೂಲಕ ರಾಜ್ಯ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ವರ್ಗಗಳ ಆಯೋಗದ ಅಧ್ಯಕ್ಷ, ಶಾಸಕ ನೆಹರು ಓಲೇಕಾರ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ‘ದೇಶದಲ್ಲಿ ಇಂದು ಮಹತ್ವದ ದಿನವಾಗಿದೆ. ಕೊರೊನಾ ವೈರಾಣು ಹರಡುವಿಕೆ ಸಮಯದಲ್ಲಿ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್‍ಗೆ ಮೊದಲ ಹಂತದಲ್ಲಿ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.

ದೇಶದಲ್ಲಿ ಮೊದಲ ಅಲೆಯಲ್ಲಿ ಕೊರೊನಾ ವೈರಾಣು ವೇಗವಾಗಿ ಹರಡಿದ್ದರಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸಲಾಯಿತು. ಎರಡನೇ ಅಲೆ ಅಷ್ಟೇನೂ ಪರಿಣಮಕಾರಿಯಾಗಿಲ್ಲ. ಆದರೂ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದರಿಂದ ವಾತಾವರಣದಲ್ಲಿರುವ ದೂಳು, ರೋಗಾಣುಗಳು ನಮ್ಮ ದೇಹವನ್ನು ಪ್ರವೇಶಿಸುವುದನ್ನು ತಪ್ಪಿಸಬಹುದು. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರ್ಥಿಕತೆಗೆ ಹೊಡೆತ:ಈ ಕೋವಿಡ್ ವೈರಾಣುವಿನಿಂದ ಜಗತ್ತೇ ಗಂಡಾಂತರದಲ್ಲಿತ್ತು. ಇಂದು ಅಮೆರಿಕ, ಬ್ರಿಟನ್‍ನಂತಹ ದೊಡ್ಡ ದೊಡ್ಡ ದೇಶಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ದೇಶದ ಆರ್ಥಿಕ ಸ್ಥಿತಿಯೂ ಸಹ ಕುಂಠಿತವಾಗಿದೆ. ಆದರೆ ಕೋವಿಡ್ ಲಸಿಕೆ ದೊರೆತಿರುವುದರಿಂದ ಮುಂದಿನ ದಿನಗಳಲ್ಲಿ ನೆಮ್ಮದಿಯ ಬದುಕು ಸಾಗಿಸಬಹುದಾಗಿದೆ. ಪ್ರಧಾನಿ ಮೋದಿ ಅವರು ವರ್ಚುವಲ್‌ ವೇದಿಕೆ ಮೂಲಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಕೋವಿಡ್ ವಿರುದ್ಧ ಹೋರಾಡಿದ ಹಾಗೂ ನಿರ್ಮೂಲನೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸಮಾಜದ ಎಲ್ಲರಿಗೂ ಲಸಿಕೆ ನೀಡಿಕೆಗೆ ಮುಂದಾಗಿರುವುದು ಸಂತಸದ ಸಂಗತಿಯಾಗಿದೆ. ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಜಿ.ಪಂ.ಅಧ್ಯಕ್ಷ ಏಕನಾಥ ಭಾನುವಳ್ಳಿ ಅವರು ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹಂತ ಹಂತವಾಗಿ ಎಲ್ಲ ಪ್ರಜೆಗಳಿಗೂ ಲಸಿಕೆ ನೀಡುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲಾಗುವುದು ಎಂದು ಹೇಳಿದರು.

ಲಸಿಕೆ ಆಶಾಕಿರಣ:ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕೋವಿಡ್‍ನಿಂದಾಗಿ 2020 ಮಾರ್ಚ್ 23ರಿಂದ ಕಾರ್ಮೋಡ ಕವಿದಂತಾಗಿತ್ತು. ಈ ಲಸಿಕೆ ಒಂದು ಆಶಾಕಿರಣವಾಗಿದೆ. ದೇಶದ 30 ಕೋಟಿ ಜನರಿಗೆ ಹಂತ– ಹಂತವಾಗಿ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ 8691 ಕೊರೊನಾ ವಾರಿಯರ್ಸ್‍ಗೆ ಮೊದಲ ಹಂತದಲ್ಲಿ 9 ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಂಡಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ತಹಶೀಲ್ದಾರ್‌ ಶಂಕರ ಜಿ.ಎಸ್‌., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸವರಾಜ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸುರೇಶ್‌ ಪೂಜಾರ ಸೇರಿದಂತೆ ಆಸ್ಪತ್ರೆ ವೈದ್ಯರು ಇದ್ದರು.

ಲಸಿಕಾ ಕೇಂದ್ರದಲ್ಲಿ ಲಸಿಕೆ ನೀಡಿಕೆ ಮಾರ್ಗಸೂಚಿಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಗಿತ್ತು. ಪೊಲೀಸ್ ಬಂದೋಬಸ್ತ್‌, ನಿರೀಕ್ಷಣಾ ಕೊಠಡಿ, ಲಸಿಕೆ ನೀಡಿಕೆ ಕೊಠಡಿ, ತುರ್ತು ನಿಗಾ ಘಟಕಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT