ಮಂಗಳವಾರ, ಜನವರಿ 19, 2021
17 °C
ಗ್ರಾಮಾಂತರ ಪ್ರದೇಶದಲ್ಲಿ ನೀತಿಸಂಹಿತೆ ಜಾರಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿಕೆ

ಜಿಲ್ಲೆಯ 209 ಗ್ರಾ.ಪಂ.ಗಳಿಗೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಜಿಲ್ಲೆಯ 209 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಸೋಮವಾರದಿಂದಲೇ ‘ಚುನಾವಣಾ ನೀತಿಸಂಹಿತೆ’ ಜಾರಿಗೆ ಬಂದಿದೆ. ಕೋವಿಡ್ ಮಾರ್ಗಸೂಚಿಯಂತೆ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮೊದಲ ಹಂತದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳ 104 ಗ್ರಾಮ ಪಂಚಾಯಿತಿಗಳಿಗೆ ಹಾಗೂ ಎರಡನೇ ಹಂತದಲ್ಲಿ ಉಳಿದ ನಾಲ್ಕು ತಾಲ್ಲೂಕುಗಳ 105 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದರು. 

ಎರಡು ಹಂತಗಳು:

ಮೊದಲ ಹಂತದಲ್ಲಿ ಜಿಲ್ಲೆಯ ರಾಣೆಬೆನ್ನೂರು ಹಾಗೂ ಹಾವೇರಿ ತಾಲ್ಲೂಕಿನ ತಲಾ 33, ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ತಲಾ 19 ಸೇರಿ 104 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಹಾನಗಲ್ ತಾಲ್ಲೂಕಿನ 39, ಶಿಗ್ಗಾವಿ ತಾಲ್ಲೂಕಿನ 27, ಸವಣೂರ ತಾಲ್ಲೂಕಿನ 21 ಹಾಗೂ ಬ್ಯಾಡಗಿ ತಾಲ್ಲೂಕಿನ 18 ಸೇರಿ 105 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಮೊದಲ ಹಂತ ಡಿ.7ರಿಂದ ನಾಮಪತ್ರ:

ಮೊದಲ ಹಂತದಲ್ಲಿ ಡಿ.7ರಿಂದ ಚುನಾವಣೆ ಅಧಿಸೂಚನೆ. ನಾಮಪತ್ರ ಸಲ್ಲಿಸಲು ಡಿ.11 ಕೊನೆಯ ದಿನವಾಗಿದೆ. ಡಿ.12ರಂದು ನಾಮಪತ್ರಗಳ ಪರಿಶೀಲನೆ, ಡಿ.14 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಡಿ.22ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿ.30ರಂದು ಬೆಳಿಗ್ಗೆ 8 ಗಂಟೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಜರುಗಲಿದೆ ಎಂದು ತಿಳಿಸಿದರು.

ಎರಡನೇ ಹಂತ ಡಿ.11ರಿಂದ ನಾಮಪತ್ರ:

ಎರಡನೇ ಹಂತದಲ್ಲಿ ಡಿ.11ರಂದು ಚುನಾವಣೆ ಅಧಿಸೂಚನೆ. ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನ. ಡಿ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ.19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಡಿ.27ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿ.30 ರಂದು ಬೆಳಿಗ್ಗೆ 8 ಗಂಟೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಜರುಗಲಿದೆ ಎಂದು ಹೇಳಿದರು.

1133 ಕ್ಷೇತ್ರಗಳು:

ಜಿಲ್ಲೆಯ ಎಂಟು ತಾಲ್ಲೂಕುಗಳ 209 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಪೈಕಿ 97 ಏಕಸದಸ್ಯ, 298 ದ್ವಿಸದಸ್ಯ, 482 ತ್ರಿಸದಸ್ಯ, 256 ನಾಲ್ಕು ಸದಸ್ಯರನ್ನು ಒಳಗೊಂಡ 1133 ಕ್ಷೇತ್ರಗಳು ಒಳಗೊಂಡಿವೆ ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಮಾತ್ರ ‘ಮಾದರಿ ನೀತಿ ಸಂಹಿತೆ’ ಜಾರಿಯಲ್ಲಿರುತ್ತದೆ. ಈಗಾಗಲೇ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಮೊದಲ ಹಂತದ ತರಬೇತಿ ಪೂರ್ಣಗೊಳಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಿಯಮಾನುಸಾರ ಅಭ್ಯರ್ಥಿಗಳಿಗೆ ಮುಕ್ತವಾದ ಚಿಹ್ನೆ ಹಂಚಿಕೆ ಮಾಡಲಾಗುವುದು. ಚುನಾವಣಾ ವೆಚ್ಚದ ಮಿತಿ ಇರುವುದಿಲ್ಲ. ಆದರೆ ಯಾವುದೇ ಆಮಿಷ, ವಸ್ತು ಹಾಗೂ ಹಣದ ಆಮಿಷ ತೋರಿಸಿದರೆ ಕ್ರಮವಹಿಸಲಾಗುವುದು. ನ.30-ರಿಂದ ಡಿ.31ರ ಸಂಜೆ 5 ಗಂಟೆವರೆಗೆ ‘ಮಾದರಿ ನೀತಿ ಸಂಹಿತೆ’ ಜಾರಿಯಲ್ಲಿರುತ್ತದೆ. ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಗಳಿಗೆ ನೀತಿಸಂಹಿತೆ ಅನ್ವಯಿಸುವುದಿಲ್ಲ.

ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ್‌ ಪ್ರಶಾಂತ ನಾಲವಾರ ಇದ್ದರು. 

ವಾಹನಗಳ ವಶಕ್ಕೆ ಸೂಚನೆ

ಗ್ರಾಮ ಪಂಚಾಯತ್ ಚುನಾವಣೆ ಮಾದರಿ ನೀತಿಸಂಹಿತೆ ಜಾರಿ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಅಧಿಕಾರೇತರರಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ತಕ್ಷಣ ವಶಕ್ಕೆ ಪಡೆದುಕೊಳ್ಳಲು ಆಯಾ ತಾಲ್ಲೂಕು ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದ್ದಾರೆ.

ಆಯಾ ತಾಲೂಕಿನಲ್ಲಿರುವ ನಿಗಮ, ಮಂಡಳಿ, ಸರ್ಕಾರಿ ಸಂಸ್ಥೆಗಳು, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಸರ್ಕಾರಿ ವಾಹನಗಳನ್ನು ನೀಡಿದಲ್ಲಿ ಸಂಬಂಧಪಟ್ಟ ತಹಶೀಲ್ದಾರರು ತಕ್ಷಣವೇ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಸರ್ಕಾರಿ ನಿರೀಕ್ಷಣಾ ಮಂದಿರ ವಶಕ್ಕೆ ಸೂಚನೆ

ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬರುವ ಎಲ್ಲ ಇಲಾಖೆಗಳ ಸರ್ಕಾರಿ ನಿರೀಕ್ಷಣಾ ಮಂದಿರಗಳನ್ನು ಹಾಗೂ ಪ್ರವಾಸಿ ಮಂದರಿಗಳನ್ನು ಕೂಡಲೇ ವಶಕ್ಕೆ ಪಡೆದು ವರದಿ ಸಲ್ಲಿಸಲು ತಹಶೀಲ್ದಾರಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.