ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪರ್ವ ದೇಶದ ಗರ್ವ

ಈ ವರ್ಷದ ಸ್ವೀಪ್ ಘೋಷವಾಕ್ಯ: ಸಿಇಒ ಅಕ್ಷಯ ಶ್ರೀಧರ್‌ ಮಾಹಿತಿ
Published 14 ಮಾರ್ಚ್ 2024, 15:32 IST
Last Updated 14 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಹಾವೇರಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ, ಶಾಲಾ ಕಾಲೇಜು ಚುನಾವಣಾ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳು, ಮತದಾರರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ್ ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮತದಾರರ ಸಾಕ್ಷರತಾ ಸಂಘಗಳ, ತಾಲ್ಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿಗಳ ತರಬೇತುದಾರರ ತರಬೇತಿ ಶಿಬಿರ ಉದ್ಘಾಟಿಸಿ, ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸುವ ಲೋಗೊ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈ ವರ್ಷದ ಸ್ವೀಪ್ ಘೋಷವಾಕ್ಯ ‘ಚುನಾವಣಾ ಪರ್ವ ದೇಶದ ಗರ್ವ’ ಯಾವೊಬ್ಬ ಮತದಾರನೂ ಮತದಾನದಿಂದ ಹೊರಗುಳಿಯಬಾರದು. ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ಹೊಂದಬೇಕು ಎಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಸಾಕ್ಷರತಾ ಸಂಘ ರಚನೆ:

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉತ್ತಮ ಸರ್ಕಾರವನ್ನು ರಚಿಸಲು ಸಾರ್ವತ್ರಿಕ ಚುನಾವಣೆಗಳು ಅನುವು ಮಾಡಿಕೊಡುತ್ತವೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲೆ, ಕಾಲೇಜು ವಿಶ್ವವಿದ್ಯಾಲಯಗಳು ಮತ್ತು ಮತಗಟ್ಟೆ ಕೇಂದ್ರಗಳಲ್ಲಿ ಮತದಾನ ಸಾಕ್ಷರತಾ ಸಂಘಗಳನ್ನು ರಚನೆ ಮಾಡಿ, ತರಬೇತಿ ನೀಡಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಯುವ ಮತದಾರರಲ್ಲಿ ಚುನಾವಣೆ ಹಾಗೂ ಮತದಾನ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ತರಬೇತುದಾರ ಶಬ್ಬೀರ್‌ ಮನಿಯಾರ್‌ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸಿಕಂದರ್‌ ಮುಲ್ಲಾ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರುಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಡಯಟ್ ಪ್ರಾಂಶುಪಾಲರು ಗಿರೀಶ ಪದಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT