ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ವರ್ಷದ ನಂತರ ಪ್ರಧಾನಿಗೆ ಜ್ಞಾನೋದಯ -ಸಲೀಂ ಅಹಮದ್‌

ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿಕೆ
Last Updated 24 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಹಾವೇರಿ: ‘ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ತಪ್ಪು ಮಾಡಿದ್ದೇನೆ ಎಂದು ಒಂದು ವರ್ಷದ ನಂತರ ಜ್ಞಾನೋದಯವಾಗಿದೆ. ಹುತಾತ್ಮರಾಗಿರುವ 700 ರೈತರ ಕುಟುಂಬಗಳಿಗೆ ತಲಾ ₹25 ಲಕ್ಷ ನೀಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್‌ ಚುನಾವಣಾ ಅಭ್ಯರ್ಥಿ ಸಲೀಂ ಅಹಮದ್‌ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗದ ಅನುದಾನ ಈ ಎಲ್ಲ ಅಂಶಗಳನ್ನು ಚುನಾವಣೆಯಲ್ಲಿ ಮತದಾರರ ಮುಂದಿಟ್ಟು, ಮತ ಕೇಳುತ್ತೇನೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಧನ ದರವನ್ನು ಸ್ವಲ್ಪ ಇಳಿಕೆ ಮಾಡಿದೆ ಎಂದು ಟೀಕಿಸಿದರು.

ತುಮಕೂರಿನಲ್ಲಿ ಕಾಂಗ್ರೆಸ್‌ ವತಿಯಿಂದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. 10 ದಿನಗಳ ಕಾಲ ರಾಜ್ಯದಾದ್ಯಂತ ಪ್ರತಿಭಟನಾ ರ‍್ಯಾಲಿ ನಡೆಸಿ, ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ಯುಪಿಎ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುತ್ತೇವೆ. ಗ್ರಾಮ ಪಂಚಾಯಿತಿಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.

ಹಾವೇರಿ ಜಿಲ್ಲೆಗೆ ಪ್ರಾಶಸ್ತ್ಯ:

ಮೊದಲ ಬಾರಿಗೆ ಹಾವೇರಿ ಜಿಲ್ಲೆಯ ಅಭ್ಯರ್ಥಿಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. 25 ವರ್ಷಗಳಿಂದ ಹಾವೇರಿ ಮತದಾರನಾಗಿರುವ ನಾನು, ಹೊರಗಿನವನಲ್ಲ. 2009 ಮತ್ತು 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ನಾನು ಹಾವೇರಿ ಜಿಲ್ಲೆಯನ್ನು ನೋಡಲ್‌ ಜಿಲ್ಲೆಯನ್ನಾಗಿ ತೆಗೆದುಕೊಂಡು, 10 ವರ್ಷ ಜಿಲ್ಲೆಯ ಅಭಿವೃದ್ಧಿಗೆ ಅನುದಾನ ತಂದಿದ್ದೇನೆ. ಅಖಂಡ ಧಾರವಾಡ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಣ ರಾಜಕೀಯವಲ್ಲ:

2023ರಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರಲಿದೆ. ರಾಜೀವಗಾಂಧಿ ಅವರು ಪಂಚಾಯಿತಿಗಳ ಸಬಲೀಕರಣದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ. ಮತದಾರರು ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಸರ್ಕಾರವನ್ನು ಕೈ ಹಿಡಿಯಲಿದ್ದಾರೆ. ನಮ್ಮಲ್ಲಿ ಯಾವುದೇ ಬಣ ರಾಜಕೀಯವಲ್ಲ. ನಮ್ಮಲ್ಲಿ ಇರುವುದು ಸೋನಿಯಾಗಾಂಧಿ ಬಣವೊಂದೇ. ವರಿಷ್ಠರು ಅಳೆದು ತೂಗಿ ನನಗೆ ಟಿಕೆಟ್‌ ನೀಡಿದ್ದಾರೆ. ಈ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ್‌, ಮಾಜಿ ಶಾಸಕ ಬಿ.ಎಚ್‌. ಬನ್ನಿಕೋಡ, ಮುಖಂಡರಾದ ನಾಗರಾಜ ಛಬ್ಬಿ, ಆರ್‌.ವಿ.ವೆಂಕಟೇಶ, ಎಸ್‌.ಆರ್‌.ಪಾಟೀಲ, ಸೋಮಣ್ಣ ಬೇವಿನಮರದ, ಹಾವೇರಿ ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಇದ್ದರು.

ಪರಿಷತ್‌ ಚುನಾವಣೆಯಲ್ಲೂ ಜೆಡಿಎಸ್‌ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರದ ವಿಷಯದಲ್ಲಿ ಸರ್ಕಾರವನ್ನು ಬೆತ್ತಲೆಗೊಳಿಸುತ್ತೇವೆ
– ಸಲೀಂ ಅಹಮದ್‌, ವಿಧಾನ ಪರಿಷತ್‌ ಚುನಾವಣಾ ಅಭ್ಯರ್ಥಿ

ಶೇ 40ರಷ್ಟು ಕಮಿಷನ್‌: ತನಿಖೆಗೆ ಆಗ್ರಹ

ಶೇ 40ರಷ್ಟು ಕಮಿಷನ್‌ ದಂಧೆ ನಡೆಯುತ್ತಿದೆ ಎಂದು ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದು ಇತಿಹಾಸದಲ್ಲೇ ಇದೇ ಮೊದಲು. ಮೋದಿ ಅವರು ಕೇಂದ್ರ ತನಿಖಾ ಸಂಸ್ಥೆಗಳಿಂದ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್‌ ಅಭ್ಯರ್ಥಿ ಸಲೀಂ ಅಹಮದ್‌ ಆಗ್ರಹಿಸಿದರು.

ಬಿಟ್‌ ಕಾಯಿನ್‌ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ, ‘ಬಿಟ್‌ ಕಾಯಿನ್‌ ದಂಧೆ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಕಾಂಗ್ರೆಸ್‌. ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ. ಯಾರೇ ತಪ್ಪು ಮಾಡಿರಲಿ, ಅಂಥವರ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT