ಶನಿವಾರ, ಮಾರ್ಚ್ 25, 2023
26 °C

ಕೋವಿಡ್‌ ಸಾವಿನಲ್ಲಿ ಸುಳ್ಳು ಲೆಕ್ಕ: ಎಂ.ಎಸ್‌. ಅಂಗಡಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಜಿಲ್ಲೆಯಲ್ಲಿ ಕೋವಿಡ್‌ನಿಂದ 600 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಆದರೆ 2 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಅನುಮಾನವಿದೆ. ಸಾವಿನ ಸಂಖ್ಯೆಯಲ್ಲೂ ಜಿಲ್ಲಾಡಳಿತ ಸುಳ್ಳು ಲೆಕ್ಕ ಕೊಡುತ್ತಿದೆ’ ಎಂದು ಕೆಪಿಸಿಸಿ ಸದಸ್ಯ ಎಂ.ಎಸ್‌. ಅಂಗಡಿ ಗಂಭೀರ ಆರೋಪ ಮಾಡಿದರು. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಹಾವೇರಿ ಜಿಲ್ಲೆ ಮರಣ ಪ್ರಮಾಣದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ನಿತ್ಯ 4–5 ಜನ ಸಾಯುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದಿರುವುದೇ ಮರಣ ಪ್ರಮಾಣ ಹೆಚ್ಚಲು ಕಾರಣವಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಶಾಸಕರು ಹೊಣೆ ಹೊರಬೇಕು. ಉತ್ತಮ ಚಿಕಿತ್ಸೆ ನೀಡಿ, ಸಾವು ಉಂಟಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. 

ಜಿಲ್ಲಾಸ್ಪತ್ರೆಯ ಕೆಲವು ವೈದ್ಯರು ಬಯೋಮೆಟ್ರಿಕ್ ನಲ್ಲಿ ಹಾಜರಾತಿ ಹಾಕಿ, ಸರ್ಕಾರಿ ಸಂಬಳ ತೆಗೆದುಕೊಂಡು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 5–10 ವರ್ಷಗಳಿಂದ ಇಲ್ಲೇ ಠಿಕಾಣಿ ಹೂಡಿರುವ ವೈದ್ಯರು, ಅಧಿಕಾರಿಗಳನ್ನು ಆಡಳಿತ ಹಿತದೃಷ್ಟಿಯಿಂದ ಬೇರೆ ಜಿಲ್ಲೆಗಳಿಗೆ ವರ್ಗಾಯಿಸಬೇಕು. ಖಾಸಗಿ ಆಸ್ಪತ್ರೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜನರಿಂದ ಹಣ ಸುಲಿಗೆ ಮಾಡುತ್ತಿರುವ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

ಜಿಲ್ಲೆಯ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗರ್ಭಕೋಶ ಚಿಕಿತ್ಸೆಗೆ ಸೌಲಭ್ಯದ ಕೊರತೆ ಇದೆ. ಎಂ.ಆರ್‌.ಐ ಸ್ಕ್ಯಾನಿಂಗ್ ಸೌಲಭ್ಯವಿಲ್ಲ. ಡಯಾಲಿಸಿಸ್‌ ಕೇಂದ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ. ಕಪ್ಪು ಶಿಲೀಂಧ್ರ ಸೋಂಕಿತರಿಗೆ ಶಸ್ತ್ರಚಿಕಿತ್ಸೆ ಸೌಲಭ್ಯವಿಲ್ಲ. ಹೀಗೆ ಹಲವಾರು ಕೊರತೆಗಳಿಂದ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ದೂರಿದರು. 

2018 ಮತ್ತು 2019ನೇ ಸಾಲಿನಲ್ಲಿ ಪ್ರವಾಹದಿಂದ ಮನೆ ಹಾನಿ, ಬೆಳೆ ನಷ್ಟ ಅನುಭವಿಸಿದವರಿಗೆ ಇದುರವರೆಗೂ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಮುಖ್ಯಮಂತ್ರಿ ಅವರು ಘೋಷಿಸಿದ ಪರಿಹಾರ ಪ್ಯಾಕೇಜ್‌ ಎಷ್ಟೋ ಅರ್ಹರಿಗೆ ಇನ್ನೂ ಸಿಕ್ಕಿಲ್ಲ. ರಾಜ್ಯದಲ್ಲಿ 237 ಸಾರಿಗೆ ನೌಕರರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಂಬಂಧಿಕರಿಗೆ ಬಿಟ್ಟರೆ, ಇತರರಿಗೆ ಪರಿಹಾರ ಸಿಕ್ಕಿಲ್ಲ. ಬಿಜೆಪಿ ಸರ್ಕಾರಗಳು ತೈಲ ಮತ್ತು ದಿನಸಿ ವಸ್ತುಗಳ ಬೆಲೆ ಏರಿಸಿ, ಜನಸಾಮಾನ್ಯರ ಬದುಕನ್ನು ಬೀದಿಪಾಲು ಮಾಡಿವೆ ಎಂದು ವಾಗ್ದಾಳಿ ಮಾಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು