ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ: ಎಲ್ಲರಿಗೂ ಊಟ, ಪ್ರತಿನಿಧಿಗಳಿಗೆ ಮಾತ್ರ ವಸತಿ

ರಾಜ್ಯ ಕಸಾಪ ಕಾರ್ಯಕಾರಿ ಸಭೆ: ಸೈನಿಕರಿಗೆ ಶುಲ್ಕ ರಹಿತ ನೋಂದಣಿ, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ
Last Updated 6 ಡಿಸೆಂಬರ್ 2022, 14:13 IST
ಅಕ್ಷರ ಗಾತ್ರ

ಹಾವೇರಿ: ‘ಜ.6ರಿಂದ ಜ.8ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ಮಾತ್ರ ವಸತಿ ಸೌಕರ್ಯ ಒದಗಿಸಲಾಗುವುದು. ಉಳಿದಂತೆ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ನಿಮಿತ್ತ ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಕಾರ್ಯಕಾರಿ ಸಭೆ ನಡೆಸಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳ ನೋಂದಣಿ, ಪುಸ್ತಕ ಮಳಿಗೆಗಳ ನೋಂದಣಿ ಹಾಗೂ ವಾಣಿಜ್ಯ ಮಳಿಗೆಗಳ ನೋಂದಣಿಗೆ ಆ್ಯಪ್‌ ರಚಿಸಲಾಗಿದೆ. ಡಿ.1ರಿಂದ ನೋಂದಣಿ ಕಾರ್ಯ ಆರಂಭವಾಗಿದೆ. ಡಿ.18ರವರೆಗೆ ನೋಂದಣಿಗೆ ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಡಿ.18ರ ನಂತರ ಎಷ್ಟು ಪ್ರತಿನಿಧಿಗಳು ನೋಂದಣಿಯಾಗಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತದೊಂದಿಗೆ ಹಂಚಿಕೊಳ್ಳಲಾಗುವುದು.ಸೈನಿಕರಿಗೆ ಪ್ರತಿನಿಧಿಗಳ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಸಮೀಪದಲ್ಲಿ ವಸತಿ ಸೌಕರ್ಯ ಒದಗಿಸಲಾಗುವುದು. ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರ ವಹಿಸಲಾಗುವುದು ಎಂದರು.

ಸಕಲ ಸಿದ್ಧತೆ:ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮಾತನಾಡಿ,ಗಣ್ಯರು, ಅತಿ ಗಣ್ಯರು, ನೋಂದಾಯಿತ ಪ್ರತಿನಿಧಿಗಳಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೋಟೆಲ್, ವಸತಿ ನಿಲಯ, ಕಲ್ಯಾಣ ಮಂಟಪಗಳಲ್ಲಿ ವಸತಿ ವ್ಯವಸ್ಥೆ ಕೈಗೊಳ್ಳಲಾಗಿದೆ. ಮಹಿಳೆಯರಿಗೆ ವಿಶೇಷವಾಗಿ ಸ್ಥಳೀಯವಾಗಿ ವಸತಿ ಹಾಗೂ ಮೂಲಸೌಕರ್ಯ ಕಲ್ಪಿಸುವಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

130 ಎಕರೆ ವಿಶಾಲ ಜಾಗದಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ನಡೆಸಲಾಗಿದೆ. 70 ಎಕರೆ ಪ್ರದೇಶದಲ್ಲಿ ವಿವಿಧ ಮಳಿಗೆಗಳನ್ನು ತೆರೆಯಲಾಗುವುದು, 60 ಎಕರೆ ಜಾಗದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಿಂದ 100 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಬಿಗಿ ಭದ್ರತೆ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಸಮ್ಮೇಳನದಲ್ಲಿ ಭಾಗವಹಿಸುವ ರಕ್ಷಣಾ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆಯ ಮಾಹಿತಿಯನ್ನು ವಿವರಿಸಿ, ಪೊಲೀಸ್ ಚೆಕ್‍ಪೋಸ್ಟ್ ವ್ಯವಸ್ಥೆ, ತುರ್ತು ಸ್ಪಂದನಾ ವಾಹನದ ವ್ಯವಸ್ಥೆ, ವೈರಲೆಸ್ ಸಂಪರ್ಕ, ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ವೇದಿಕೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷ ವೈ.ವಿ. ಆಲದಕಟ್ಟಿ, ಕೇಂದ್ರ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಇದ್ದರು.

***

‘ಆಫ್‌ಲೈನ್‌ ನೋಂದಣಿಗೆ ಅವಕಾಶ ಕಲ್ಪಿಸಿ’
ವಿವಿಧ ಜಿಲ್ಲೆಯ ಅಧ್ಯಕ್ಷರು ಮಾತನಾಡಿ, ಕೆಲವೊಮ್ಮೆ ತಾಂತ್ರಿಕ ತೊಂದರೆಯಿಂದ ಆ್ಯಪ್‍ನಲ್ಲಿ ನೋಂದಾಯಿಸಲು ಸಾಧ್ಯವಾಗದವರಿಗೆ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಲು ಒಂದೆರಡು ದಿನ ಸಮಯ ನಿಗದಿಪಡಿಸಲು ಮನವಿ ಮಾಡಿಕೊಂಡರು.

ವಸತಿ ವ್ಯವಸ್ಥೆಯ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಮ್ಮೇಳನದ ಪೂರ್ವ ದಿನದ ರಾತ್ರಿ ಸರಳ ಊಟದ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಸಮ್ಮೇಳನದ ಜಾಗದಲ್ಲಿ ದೂಳಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಒಒಡಿ ಪ್ರಮಾಣಪತ್ರ ನೀಡುವಲ್ಲಿ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿಕೊಂಡರು.

*

ನಿತ್ಯ ಕನಿಷ್ಠ ಒಂದು ಲಕ್ಷ ಜನ ಸಮ್ಮೇಳನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಎಲ್ಲರಿಗೂ ಉಚಿತ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
– ಮೊಹಮ್ಮದ್‌ ರೋಶನ್‌, ಸಿಇಒ, ಜಿಲ್ಲಾ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT