ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಉತ್ಪನ್ನ ಸಾಗಣೆಗೆ ‘ಗ್ರೀನ್ ಪಾಸ್’

ಕಳಪೆ ಬೀಜ, ರಸಗೊಬ್ಬರ ಮಾರಾಟ ಮಾಡಿದರೆ ಲೈಸನ್ಸ್ ರದ್ದು: ಬಿ.ಸಿ.ಪಾಟೀಲ
Last Updated 9 ಏಪ್ರಿಲ್ 2020, 15:40 IST
ಅಕ್ಷರ ಗಾತ್ರ

ಹಾವೇರಿ: ‘ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ಕಳಪೆ ಬೀಜ, ಗೊಬ್ಬರ ಮಾರಾಟ ಮಾಡಿದರೆ ಲೈಸನ್ಸ್ ರದ್ದುಪಡಿಸಬೇಕು. ಹೊರ ರಾಜ್ಯ, ಹೊರ ಜಿಲ್ಲೆಗಳಿಗೆ ಕೃಷಿ ಪರಿಕರಗಳು, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ‘ಗ್ರೀನ್ ಪಾಸ್’ ನೀಡಬೇಕು. ಕೋವಿಡ್ ನೆಪಹೇಳಿ ಯಾವುದೇ ನಿರ್ಬಂಧ ವಿಧಿಸಬಾರದು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಬಿತ್ತನೆ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳ ಹಾಗೂ ಕೃಷಿ ಬೀಜ, ಗೊಬ್ಬರ, ಉಪಕರಣಗಳ ವಿತರಕರು, ಕೃಷಿ ಉತ್ಪನ್ನ ಮಾರಾಟಗಾರರ ಸಭೆ ನಡೆಸಿದರು.

ಮುಂದಿನ ವಾರದಿಂದ ಮುಂಗಾರು ಆರಂಭವಾಗಲಿದೆ. ಕೃಷಿ ಬಿತ್ತನೆ, ಕೋಯ್ಲು, ಕೃಷಿ ತೋಟಗಾರಿಕೆ ಉತ್ಪನ್ನಗಳ ಮಾರಾಟ, ಕೃಷಿ ಉಪಕರಣಗಳ ದುರಸ್ತಿ, ಮಾರಾಟ, ಕೃಷಿಗೆ ಬೇಕಾದ ಇಂಧನ ಹಾಗೂ ಪೈಪ್‍ಗಳು ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು. ಮುಕ್ತವಾದ ಅವಕಾಶಗಳನ್ನು ಕಲ್ಪಿಸಬೇಕು. ಕೃಷಿ ಚಟುವಟಿಕೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಸೂಚನೆ ನೀಡಿದರು.

ದುಬಾರಿ ದರವಿದ್ದರೆ ಕ್ರಮ:ಕಳಪೆ ಬಿತ್ತನೆ ಬೀಜ, ಗೊಬ್ಬರ ಮಾರಾಟವಾಗದಂತೆ ಎಚ್ಚರವಹಿಸಬೇಕು. ಕೃಷಿ ವಿಜಿಲೆನ್ಸ್‌ ಅಧಿಕಾರಿಗಳು ಅನಿರೀಕ್ಷಿತವಾಗಿ ಅಂಗಡಿಗಳ ತಪಾಸಣೆ ಮಾಡಬೇಕು. ಒಂದೊಮ್ಮೆ ಕಳಪೆ ಎಂದು ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಕಳಪೆ ಬೀಜ, ಗೊಬ್ಬರದಿಂದ ರೈತ ಆತ್ಮಹತ್ಯೆ ಮಾಡಿಕೊಂಡರೆ ಅದು ಕೊಲೆ ಮಾಡಿದಂತೆ. ಇದನ್ನು ಎಚ್ಚರಿಕೆಯಿಂದ ಗಮನಿಸಿ. ಕಠಿಣ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.

ಸಮಯದ ನಿರ್ಬಂಧವಿಲ್ಲ:ಎ.ಪಿ.ಎಂ.ಸಿ. ಮಾರುಕಟ್ಟೆಗಳನ್ನು ತೆರೆದಿಡಬೇಕು. ಬೀಜ, ಗೊಬ್ಬರ, ಔಷಧ ಅಂಗಡಿ ತೆರೆಯಲು ಸಮಯ ನಿಗದಿ ಮಾಡಬಾರದು. ರೈತರು ಕೊಳವೆಬಾವಿ ಕೊರೆಸಲು ಲಾರಿಗಳಿಗೆ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.
ಹಣ್ಣು, ತರಕಾರಿ, ಹೂವು, ಶುಂಠಿ ಸೇರಿದಂತೆ ರೈತರ ಬೆಳೆಗಳನ್ನು ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಸಾಗಾಣಿಕೆ ಮಾಡಲು ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.

ರೈತರು ಆಂಧ್ರ ಮತ್ತು ಮಹಾರಾಷ್ಟ್ರ ರಾಜ್ಯಕ್ಕೆ ಜಿಲ್ಲೆಯ ಮಾವಿನ ಹಣ್ಣನ್ನು ಸಾಗಾಣಿಕೆ ಮಾಡಲಾಗುತ್ತದೆ. ಆ ರಾಜ್ಯದ ಮಾವು ಪ್ರೊಸೆಸಿಂಗ್ ಯೂನಿಟ್‍ಗಳನ್ನು ಆರಂಭಿಸುವಂತೆ ಈ ಎರಡು ರಾಜ್ಯಗಳ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ದೇಸಾಯಿ ಇದ್ದರು.ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ್, ರೇಷ್ಮೆ ಇಲಾಖೆ, ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಮುಂಗಾರು ಬಿತ್ತನೆಯ ಸಿದ್ಧತೆ ಕುರಿತಂತೆ ಸಭೆಗೆ ಮಾಹಿತಿ ನೀಡಿದರು.

ಜಿ.ಪಂ.ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಪೊಲೀಸ್ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ, ಚವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT