ಹಾವೇರಿ: ‘ಈ ಬಾರಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಸಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿರುವ ಪೂರ್ವ ಸಿದ್ಧತೆ ಕೆಲಸಗಳನ್ನು ನಿಗದಿತ ದಿನಗೊಳಗೆ ಪೂರ್ಣಗೊಳಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಹೇಳಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಆಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
‘ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮಗೆ ವಹಿಸಿರುವ ಕೆಲಸಗಳನ್ನು ಸಮನ್ವಯ ಹಾಗೂ ಜವಾಬ್ದಾರಿಯಿಂದ ಮಾಡಬೇಕು’ ಎಂದರು.
‘ಆಮಂತ್ರಣ ಪತ್ರಿಕೆ, ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಹರನ್ನು ಆಯ್ಕೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಅಲಂಕಾರ, ರಾಷ್ಟ್ರ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಆಸನ ವ್ಯವಸ್ಥೆ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ತಯಾರಿ ಮಾಡಬೇಕು’ ಎಂದು ಹೇಳಿದರು.
‘ಆಗಸ್ಟ್ 14 ಹಾಗೂ 15ರಂದು ನಗರದ ವಿವಿಧ ವೃತ್ತಗಳು, ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್, ಆಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆ ಮಾಡಬೇಕು’ ಎಂದು ಸೂಚನೆ ನೀಡಿದರು.
‘15ರಂದು ಬೆಳಿಗ್ಗೆ ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. 7.45 ಗಂಟೆಗೆ ಮೈಲಾರ ಮಹದೇವಪ್ಪ ವೃತ್ತಕ್ಕೆ ಆಗಮಿಸಬೇಕು. ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ 7.45ಕ್ಕೆ ಹುತಾತ್ಮ ಮೈಲಾರ ಮಹದೇವ ವೀರಸೌಧಕ್ಕೆ ಗೌರವ ಅರ್ಪಣೆ ಕಾರ್ಯಕ್ರಮವಿದೆ. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ.’
‘ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ ಕೆಡೆಟ್‌ಗಳು, ಸ್ಕೌಟ್ಸ್ ಆಂಡ್ ಗೈಡ್ಸ್, ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ ಇರಲಿದೆ. 9.30 ಗಂಟೆಯಿಂದ 10.30 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಜೆ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದರು.
ಉಪವಿಭಾಗಾಧಿಕಾರಿ ಚೆನ್ನಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಾಗರಾಜ ಎಲ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.