ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಹಾನಿ: ಕೂಡಲೇ ಪರಿಹಾರ ನೀಡಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್
Last Updated 7 ಆಗಸ್ಟ್ 2020, 14:30 IST
ಅಕ್ಷರ ಗಾತ್ರ

ಹಾವೇರಿ: ಮೂರು ದಿನಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಸರ್ವೆಕಾರ್ಯ ಮುಗಿಸಿ, ಆ.8ರ ಸಂಜೆಯೊಳಗೆ ಸಂತ್ರಸ್ತರಿಗೆ ಪರಿಹಾರ ಪಾವತಿಸಿ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗಳಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅತಿವೃಷ್ಟಿ ಹಾನಿ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದರು.

ಹಾನಿಯಾದ ಪ್ರತಿ ಮನೆಗಳಿಗೆ ಖುದ್ದಾಗಿ ತಹಶೀಲ್ದಾರ್‌ಗಳು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದ ಫೋಟೋ ತೆಗೆದು ಕಳುಹಿಸಬೇಕು. ಪರಿಹಾರ ಪಾವತಿಸಿದ ಕುರಿತಂತೆ ಜಿಲ್ಲಾಧಿಕಾರಿ ಮೂಲಕ ವರದಿ ಕಳುಹಿಸಿ ಎಂದು ಸೂಚನೆ ನೀಡಿದರು.

ರಸ್ತೆ, ಸೇತುವೆ ಸಮೀಕ್ಷೆ

ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಮಳೆಯಿಂದ ಹಾನಿಯಾದ ರಸ್ತೆ, ಸೇತುವೆಗಳ ಸರ್ವೆ ಕಾರ್ಯವನ್ನು ನಾಳೆಯೊಳಗಾಗಿ ಪೂರ್ಣಗೊಳಿಸಿ ಮಾಹಿತಿ ಸಲ್ಲಿಸಬೇಕು. ಮಳೆಯಿಂದ ಯಾವುದಾದರೂ ರಸ್ತೆಗಳು ಸಂಪರ್ಕ ಕಡಿತಗೊಂಡರೆ ತಾತ್ಕಾಲಿಕವಾಗಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ದುರಸ್ತಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಮಳೆಯಿಂದ ನದಿ ಹಾಗೂ ಹಳ್ಳಗಳ ಕೆಳಹಂತದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದರೆ ಜನ ಸಂಚಾರವನ್ನು ನಿಲ್ಲಿಸಬೇಕು. ನದಿ ಪಾತ್ರದಲ್ಲಿ ಜನ– ಜಾನುವಾರು ತೆರಳದಂತೆ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಮೂರು ದಿನಗಳಿಂದ ಸುರಿದ ಮಳೆಯ ಪ್ರಮಾಣದ ವಿವರ ಪಡೆದ ಅವರು ಬೆಳೆಹಾನಿಯ ಕುರಿತಂತೆ ಕೃಷಿ ಜಂಟಿ ನಿರ್ದೇಶಕರಿಂದ ಮಾಹಿತಿ ಪಡೆದು ತಂಡಗಳನ್ನು ರಚಿಸಿಕೊಂಡು ಬೆಳೆಹಾನಿ ಉಂಟಾದರೆ ತಕ್ಷಣವೇ ಸರ್ವೆ ಕಾರ್ಯವನ್ನು ಆರಂಭಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಸಭೆಗೆ ಮಾಹಿತಿ ನೀಡಿದರು

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಏಳು ತಾಲ್ಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿ ಅಧಿಕಾರಿಗಳನ್ನಾಗಿ ನಿಯೋಜಿಸಲಾದೆ. ಅತಿವೃಷ್ಟಿ ನೆರೆ ಸಂಭವಿಸಿ ತೊಂದರೆಗೆ ಸಿಲುಕುವ ಜನರ ರಕ್ಷಣೆಗಾಗಿ ಗೃಹ ರಕ್ಷಕ ಹಾಗೂ ಅಗ್ನಿಶಾಮಕ ದಳ ಹಾಗೂ ನುರಿತ ತಂಡಗಳ ರಚನೆ ಮಾಡಿ ರಕ್ಷಣಾ ಸಾಮಗ್ರಿಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಳಜಿ ಕೇಂದ್ರಗಳ ತೆರೆಯಲು ಈಗಾಗಲೇ ಕಟ್ಟಡಗಳನ್ನು ಗುರುತಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತಹಶೀಲ್ದಾರ್‌ ಶಂಕರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT