ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ಸಾವಿರ ಹುದ್ದೆ ಭರ್ತಿಗೆ ಒತ್ತಾಯ

ಅರೆ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಿ: ಪುಟ್ಟಸ್ವಾಮಿ
Last Updated 24 ಫೆಬ್ರುವರಿ 2021, 13:37 IST
ಅಕ್ಷರ ಗಾತ್ರ

ಹಾವೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 69,667 ಹುದ್ದೆಗಳಿದ್ದು, 39,139 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಇನ್ನೂ 30,528 ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳ ಭರ್ತಿಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ‘ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ನೌಕರರ ಸಂಘ’ದ ಅಧ್ಯಕ್ಷ ಎ.ಪುಟ್ಟಸ್ವಾಮಿ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕೋವಿಡ್‌ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ವೈದ್ಯರಿಗೆ ವಿಶೇಷ ಭತ್ಯೆ ನೀಡಿದಂತೆ, ಅರೆ ವೈದ್ಯಕೀಯ ಸಿಬ್ಬಂದಿಗೂ ಅರ್ಹತೆಗನುಗುಣವಾಗಿ ವಿಶೇಷ ಭತ್ಯೆ ನೀಡಬೇಕು. ಆರೋಗ್ಯ ಇಲಾಖೆ ಜತೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ವಿಲೀನಗೊಳಿಸಬೇಕು. ರಾಜ್ಯದಾದ್ಯಂತ ಇರುವ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಬೋಧನಾ ಸಂಸ್ಥೆಗೆ ಹೊಂದಿಕೊಂಡಿರುವ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.

ಆರೋಗ್ಯ ಇಲಾಖೆ ನೌಕರರ ದಿನಾಚರಣೆ ಘೋಷಣೆಯಾಗಬೇಕು, ನಿಗದಿತ ಅವಧಿಯಲ್ಲಿ ವೇತನ ಪಾವತಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಾತಿಗಾಗಿ ಕೆಲಸ ಮಾಡದೆ ಸಾರ್ವಜನಿಕ ಸೇವೆಗಾಗಿ ಕೆಲಸ ಮಾಡುತ್ತಾರೆ. ಹಾಗಾಗಿ, ಅವೈಜ್ಞಾನಿಕ ಮತ್ತು ಅಪ್ರಸ್ತುತವಾದ ಬಯೋಮೆಟ್ರಿಕ್‌ ವ್ಯವಸ್ಥೆಯಿಂದ ವಿನಾಯಿತಿ ನೀಡಬೇಕು. ಮಾರ್ಚ್ ತಿಂಗಳಲ್ಲಿ ಆರೋಗ್ಯ ಇಲಾಖೆ ನೌಕರರ ರಾಜ್ಯ ಸಮ್ಮೇಳನವನ್ನು ಆಯೋಜಿಸಿ, ಸಂಘಟನೆಯನ್ನು ಗಟ್ಟಿಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮ.ಸ.ನಂಜುಂಡಸ್ವಾಮಿ, ಗೌರವಾಧ್ಯಕ್ಷ ಆರ್‌.ಶ್ರೀನಿವಾಸ್, ಬೈಲಾ ಕಮಿಟಿ ಪ್ರಧಾನ ಸಂಚಾಲಕ ಪ್ರಕಾಶ್‌ ಗಿಡ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT