ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ಭಿಕ್ಷಾಟನೆಗೆ ದೂಡುವುದು ಅಪರಾಧ

ಕಾನೂನು ಅರಿವು–ನೆರವು ಕಾರ್ಯಕ್ರಮ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ
Last Updated 22 ಜುಲೈ 2022, 15:53 IST
ಅಕ್ಷರ ಗಾತ್ರ

ಹಾವೇರಿ: ‘ಮಕ್ಕಳ ಹಕ್ಕುಗಳ ರಕ್ಷಣೆಗೆ ಅನೇಕ ಕಾನೂನುಗಳು ಜಾರಿಯಲ್ಲಿವೆ. ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಭಿಕ್ಷಾಟನೆ, ಅಪಾಯಕಾರಿ ಕೆಲಸಗಳಿಗೆ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಇಜಾರಿಲಕಮಾಪೂರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ಸಂತ್ರಸ್ತರ ಪರಿಹಾರ ಯೋಜನೆ, ಮಕ್ಕಳ ಹಕ್ಕುಗಳು’ ಕುರಿತು ಕಾನೂನು ಅರಿವು– ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಅದರಲ್ಲೂ ಅಪಾಯಕಾರಿ ಕೆಲಸದಲ್ಲಿ ಮಕ್ಕಳನ್ನು ನೇಮಿಸಿಕೊಳ್ಳುವಂತಿಲ್ಲ. ಈ ಕಾರಣಕ್ಕಾಗಿ ಜಗತ್ತಿನಾದ್ಯಂತ ಚರ್ಚೆ ನಡೆದು ಮಕ್ಕಳ ಹಕ್ಕುಗಳ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಯಾವುದೇ ಮಗು ಶ್ರೀಮಂತ-ಬಡವ , ಕಪ್ಪು- ಬಿಳಿಪು ಎನ್ನುವ ಕಾರಣಕ್ಕೆ ತಾರತಮ್ಯ ಮಾಡುವಹಾಗಿಲ್ಲ. ಕಾನೂನಿನ ಪ್ರಕಾರ ಎಲ್ಲರೂ ಸಮಾನರು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಮಕ್ಕಳ ಮೇಲೆ ದೌರ್ಜನ್ಯಗಳು ನಡೆದರೆ ಸರ್ಕಾರ ಮಧ್ಯಪ್ರವೇಶಿಸಿ ಮಕ್ಕಳನ್ನು ರಕ್ಷಣೆ ಮಾಡುವ ಕೆಲಸಮಾಡುತ್ತದೆ ಎಂದು ಹೇಳಿದರು.

ಭಾರತ ದೇಶದಲ್ಲಿ ಈಗಲೂ ಮೂರು ಕೋಟಿಯಷ್ಟು ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ. ಇಂತಹ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರುವ ಕಾರ್ಯವಾಗಬೇಕಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆದರೆ, ಶಾಲೆಯಿಂದ ಹೊರಗುಳಿದು ಕೆಲಸ ಮಾಡುತ್ತಿದ್ದರೆ, ಭಿಕ್ಷಾಟನೆಯಲ್ಲಿ ತೊಡಗಿದ್ದರೆ ಇಂತಹ ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಿದೆ. ಇಂತಹ ಸನ್ನಿವೇಶ ಕಂಡುಬಂದರೆ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ವಿದ್ಯಾರ್ಥಿಯ ಜೀವನ ಅಮೂಲ್ಯವಾದದ್ದು, ಯಾವುದೋ ಆಕರ್ಷಣೆಗೊಳಗಾಗಿ ಅಡ್ಡದಾರಿ ಹಿಡಿದು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಓದುವ ಸಮಯದಲ್ಲಿ ಸ್ಮಾರ್ಟ್ ಫೋನ್ ಅವಶ್ಯವಿಲ್ಲ. ದಯಮಾಡಿ ಸ್ಮಾರ್ಟ್ ಫೋನ್ ಬಳಸಬೇಡಿ. ಒಂದು ವೇಳೆ ಫೋನ್ ಬೇಕು ಎಂದರೆ ಕೀ ಪ್ಯಾಡ್‍ ಮೊಬೈಲ್ ಬಳಸಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್‌ ನ್ಯಾಯಾಧೀಶ ಪುಟ್ಟರಾಜು ಮಾತನಾಡಿದರು.ಪ್ರೊ.ಶೇಖರ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪನೆಲ್ ವಕೀಲ ಪಿ.ಎಂ.ಬೆನ್ನೂರ ಅವರು ಸಂತ್ರಸ್ತ ಪರಿಹಾರ ಯೋಜನೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಅವರು ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.

ಡಿಡಿಪಿಯು ಉಮೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಕಾಲೇಜು ಪ್ರಾಚಾರ್ಯ ಕೃಷ್ಣಪ್ಪ ಕೆ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಶೋಕ ನೀರಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT